ಆಂಬ್ಯುಲೆನ್ಸ್ ದುರುಪಯೋಗ ಆರೋಪ: ಕೇಂದ್ರ ಸಚಿವ ಸುರೇಶ್ ಗೋಪಿ ವಿರುದ್ಧ ಕೇಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ತ್ರಿಶೂರ್ ಪೂರಂ ಹಬ್ಬದ ಸಂದರ್ಭದಲ್ಲಿ ಕೇಂದ್ರ ಸಚಿವ ಸುರೇಶ್ ಗೋಪಿ ಮತ್ತು ಇತರ ಇಬ್ಬರ ವಿರುದ್ಧ ಆಂಬ್ಯುಲೆನ್ಸ್ ದುರುಪಯೋಗಪಡಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಕೇಂದ್ರ ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ಮತ್ತು ಆಂಬ್ಯುಲೆನ್ಸ್ ಚಾಲಕನ ವಿರುದ್ಧ ತ್ರಿಶೂರ್ ಪೂರ್ವ ಪೊಲೀಸರು ಭಾನುವಾರ ಎಫ್‌ಐಆರ್ ದಾಖಲಿಸಿದ್ದಾರೆ.

ಕೇಂದ್ರ ಸಚಿವರ ವಿರುದ್ಧ ಐಪಿಸಿಯ ಸೆಕ್ಷನ್ 279 (ಸಾರ್ವಜನಿಕ ಮಾರ್ಗದಲ್ಲಿ ದುಡುಕಿನ ಚಾಲನೆ ಅಥವಾ ಸವಾರಿ) ಮತ್ತು 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು) ಮತ್ತು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 179, 184, 188 ಮತ್ತು 192 ನ್ನು ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ನಿರ್ಬಂಧಗಳನ್ನು ಉಲ್ಲಂಘಿಸಿ ಪೂರಂ ಸ್ಥಳಕ್ಕೆ ತೆರಳಲು ಆಂಬ್ಯುಲೆನ್ಸ್ ನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಸುರೇಶ್ ಗೋಪಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿ ಸ್ಥಳೀಯ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಮುಖಂಡ ಕೆ.ಪಿ.ಸುಮೇಶ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಎಫ್‌ಐಆರ್‌ ಪ್ರಕಾರ, ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಅಂದಿನ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿದ್ದ ಸುರೇಶ್ ಗೋಪಿ ಮತ್ತು ಇತರ ಆರೋಪಿಗಳು ಚುನಾವಣಾ ಪ್ರಚಾರದ ಕಾರ್ಯತಂತ್ರದ ಭಾಗವಾಗಿ ಕಾರ್ಯನಿರ್ವಹಿಸುತ್ತಿದ್ದರು. ರೋಗಿಗಳನ್ನು ಮಾತ್ರ ಕರೆದೊಯ್ಯಲು ಅನುಮತಿಸಲಾದ ಸೇವಾ ಭಾರತಿ ಒಡೆತನದ ಆಂಬ್ಯುಲೆನ್ಸ್‌ನಲ್ಲಿ ಪ್ರಯಾಣಿಸಿದ್ದಾರೆ. ಪೂರಂ ದಿನದಂದು ಜನಸಂದಣಿಯ ನಡುವೆ ತ್ರಿಶೂರ್ ರೌಂಡ್ ಮೂಲಕ ಆಂಬ್ಯುಲೆನ್ಸ್ ನ್ನು ಮಾನವ ಜೀವಕ್ಕೆ ಹಾನಿಯಾಗುವ ರೀತಿಯಲ್ಲಿ ಚಲಾಯಿಸಿದ್ದರು ಎಂದು ಎಫ್‌ಐಆರ್ ನಲ್ಲಿ ನಮೂದಿಸಲಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!