ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಎನ್‌ಡಿಎ (NDA) ಕಳಪೆ ಪ್ರದರ್ಶನದ ಹೊಣೆ ಹೊತ್ತು ದೇವೇಂದ್ರ ಫಡ್ನವೀಸ್ ಡಿಸಿಎಂ ಸ್ಥಾನದ ರಾಜೀನಾಮೆಗೆ ಮುಂದಾಗಿದ್ದು, ಆದ್ರೆ ಈ ಪ್ರಸ್ತಾಪವನ್ನು ಅಮಿತ್ ಶಾ ಅವರು ತಿರಸ್ಕರಿಸಿದ್ದಾರೆ.
ಡಿಸಿಎಂ ಫಡ್ನವೀಸ್ ಅವರು ಶಿವಸೇನೆಯ ಏಕನಾಥ್ ಶಿಂಧೆ ಬಣ ಮತ್ತು ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಜೊತೆ ಮಹಾರಾಷ್ಟ್ರ ಸರ್ಕಾರದ ಭಾಗವಾಗಿದ್ದಾರೆ. ಚುನಾವಣೆಯಲ್ಲಿ ಕೇವಲ 17 ಸ್ಥಾನ ಗೆಲ್ಲುವಲ್ಲಿ ಮಾತ್ರ ಯಶಸ್ವಿಯಾಗಿದ್ದರು.
ಕಾಂಗ್ರೆಸ್, ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಶರದ್ಚಂದ್ರ ಪವಾರ್) ಒಳಗೊಂಡ ಮಹಾ ವಿಕಾಸ್ ಅಘಾಡಿ 30 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿತು.
ಹೀಗಾಗಿ ಶುಕ್ರವಾರದ ಮೊದಲು ನಡೆದ ಎನ್‌ಡಿಎ ಸಭೆಯ ನಂತರ, ಬಿಜೆಪಿ ನಾಯಕರು ಸಹ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೊಂದಿಗೆ ಕುಳಿತು ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಕಾರ್ಯಕ್ಷಮತೆಯನ್ನು ಚರ್ಚಿಸಿದರು. ಈ ವೇಳೆ ಫಡ್ನವಿಸ್ ರಾಜೀನಾಮೆ ವಿಷಯ ಪ್ರಸ್ತಾಪಿಸಿದ್ದರು.
ನಂತರ ಡಿಸಿಎಂ ಫಡ್ನವೀಸ್, ಅಮಿತ್ ಶಾರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ. ಫಡ್ನವೀಸ್ ರಾಜೀನಾಮೆ ಪ್ರಸ್ತಾಪವನ್ನು ತಿರಸ್ಕರಿಸಿರುವ ಅಮಿತ್ ಶಾ, ಮಹಾರಾಷ್ಟ್ರ ಸರ್ಕಾರಕ್ಕಾಗಿ ಕೆಲಸ ಮಾಡುವುದನ್ನು ಮುಂದುವರಿಸಲು ಸೂಚಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಪುನರುಜ್ಜೀವನಕ್ಕೆ ಯೋಜನೆ ಸಿದ್ಧಪಡಿಸುವಂತೆ ಸಲಹೆ ನೀಡಿದ್ದಾರೆ.
ಈ ವರ್ಷದ ಅಕ್ಟೋಬರ್‌ನಲ್ಲಿ ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ.