ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೃತ್ ಭಾರತ್ ರೈಲು ನಿಲ್ದಾಣ ಅಭಿವೃದ್ಧಿ ಯೋಜನೆಯಡಿಲ್ಲಿ ಕೇಂದ್ರ ಸರಕಾರ ದೇಶಾದ್ಯಂತ 508 ರೈಲು ನಿಲ್ದಾಣಗಳನ್ನು ಮರು ಅಭಿವೃದ್ಧಿಗೊಳಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಏಕಕಾಲದಲ್ಲಿ ಚಾಲನೆ ನೀಡಿದರು.
ಈ ಯೋಜನೆಯಡಿಯಲ್ಲಿ ಮಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳ ರೈಲ್ವೆ ನಿಲ್ದಾಣಗಳ ಮರು ನಿರ್ಮಾಣವಾಗಲಿದೆ. ಇದಕ್ಕಾಗಿ ಕೇಂದ್ರ ಸರಕಾರ ಒಟ್ಟು 24 ಸಾವಿರದ 470 ಕೋಟಿ ರೂಪಾಯಿ ವಿನಿಯೋಗಿಸುತ್ತಿದೆ. ಮಂಗಳೂರು ಜಂಕ್ಷನ್ ರೈಲು ನಿಲ್ದಾಣ 19 ಕೋಟಿ 32 ಲಕ್ಷ ರೂಪಾಯಿ ವೆಚ್ಚದಲ್ಲಿ ಪುನರ್ ಅಭಿವೃದ್ಧಿಗೊಳಿಸಲು ಉದ್ದೇಶಿಸಲಾಗಿದೆ.
ಮಂಗಳೂರಿನ ಕಾಮಗಾರಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಕಂಕನಾಡಿಯ ಮಂಗಳೂರು ಜಂಕ್ಷನ್ ರೈಲು ನಿಲ್ದಾಣವು ಸುಮಾರು 19.32 ಕೋಟಿ ರೂಪಾಯಿ ವೆಚ್ಚದಲ್ಲಿ ಒಂದು ವರ್ಷದ ಒಳಗಾಗಿ ಸುಸಜ್ಜಿತವಾಗಿ ನಿರ್ಮಾಣವಾಗಲಿದೆ. ಅಲ್ಲದೆ ವಿದ್ಯುದ್ದೀಕರಣ ಕಾಮಗಾರಿ ಪೂರ್ಣಗೊಂಡ ತಕ್ಷಣ ಮಂಗಳೂರು ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭವಾಗಲಿದೆ. ಮಂಗಳೂರು -ಗೋವಾ ನಡುವೆಯೂ ವಂದೇ ಭಾರತ್ ರೈಲು ಆರಂಭವಾಗಲಿದ್ದು, ರೈಲ್ವೆ ಸಚಿವರು ಇದಕ್ಕೆ ಒಪ್ಪಿಗೆ ನೀಡಿದ್ದಾರೆ ಎಂದರು.
ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ರೈಲ್ವೆ ಅಭಿವೃದ್ಧಿಗಾಗಿ 50 ಸಾವಿರ ಕೋಟಿ ರೂಪಾಯಿ ಬಿಡುಗಡೆಯಾಗಿದೆ ಎಂದು ನಳಿನ್ ಕುಮಾರ್ ಹೇಳಿದರು.
2023-24ನೇ ಸಾಲಿನ ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಸೇರಿದಂತೆ ಮಂಗಳೂರು ಕೇಂದ್ರ ನಿಲ್ದಾಣ, ಬಂಟ್ವಾಳ ಹಾಗೂ ಸುಬ್ರಹ್ಮಣ್ಯ ರೈಲು ನಿಲ್ದಾಣಗಳನ್ನು ಅಮೃತ್ ಭಾರತ್ ರೈಲು ನಿಲ್ದಾಣ ಅಭಿವೃದ್ಧಿ ಯೋಜನೆಯಡಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದೆಂದು ಘೋಷಿಸಲಾಗಿತ್ತು. ಈ ಯೋಜನೆಯ ಇತರೆ ರೈಲು ನಿಲ್ದಾಣಗಳ ನಿರ್ಮಾಣ ಕಾರ್ಯ ಶೀಘ್ರದಲ್ಲಿಯೇ ಕೈಗೆತ್ತಿಕೊಳ್ಳಲಾಗುವುದು ಎಂದು ಸಂಸದರು ನುಡಿದರು.
ಮೋದಿ ಪ್ರಧಾನಿಯಾದ ಬಳಿಕ ಭಾರತದಲ್ಲಿ ಸ್ವರ್ಣ ಯುಗ ಆರಂಭವಾಗಿದೆ. ರೈಲ್ವೆಯಲ್ಲಿ ಅಭೂತಪೂರ್ವ ಅಭಿವೃದ್ಧಿ ಕಾರ್ಯಗಳಾಗಿವೆ. ಸ್ವದೇಶಿ ಚಿಂತನೆಯ ವಂದೇ ಭಾರತ್ ಯೋಜನೆ ಜಗತ್ತಿನ ಆಕರ್ಷಣೆಯಾಗಿ ಮಾರ್ಪಟ್ಟಿದೆ ಎಂದವರು ಹೇಳಿದರು.
ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಪ್ರಧಾನಿ ನೇತ್ರತ್ವದಲ್ಲಿ ಕಳೆದ 9 ವರ್ಷದಲ್ಲಿ ರೈಲ್ವೆ ಇಲಾಖೆಯಲ್ಲಿ ಮಹತ್ತರ ಬದಲಾವಣೆಯಾಗಿದೆ. ರೈಲಿನಲ್ಲಿ ಗುಣಮಟ್ಟದ ಆಹಾರಕ್ಕೂ ಆದ್ಯತೆ ನೀಡುವುದರೊಂದಿಗೆ 700 ಕ್ಕೂ ಅಧಿಕ ರೈಲ್ವೆ ಸ್ಟೇಷನ್ಗೆ ವೈ ಫೈ ಅಳವಡಿಕೆಯಾಗಿದೆ. ಈ ವರ್ಷದಲ್ಲಿ ಬಜೆಟ್ ನಲ್ಲಿ ಮಂಗಳೂರು ಭಾಗಕ್ಕೆ ವಿಶೇಷ ಆದ್ಯತೆ ನೀಡಲಾಗಿದ್ದು, 10 ಸಾವಿರ ಕೋಟಿಗೂ ಅಧಿಕ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳಾಗಲಿವೆ ಎಂದರು.
ಮಂಗಳೂರು ಜಂಕ್ಷನ್ ರೈಲು ನಿಲ್ದಾಣಕ್ಕೆ ಮತ್ತೆ ಮೂರು ರಸ್ತೆಗಳ ಜೋಡಣೆಯಾಗಲಿದ್ದು ಅಭಿವೃದ್ಧಿ ಕಾರ್ಯ ವೇಗಗತಿಯಲ್ಲಿ ಸಾಗಲಿದೆ. ಅಲ್ಲದೆ ಪಾದಚಾರಿ ಮೇಲ್ಸೇತುವೆ, ಪಾರ್ಸೆಲ್ ಕಚೇರಿ ಇತ್ಯಾದಿಗಳ ನಿರ್ಮಾಣವಾಗಲಿದೆ ಎಂದು ಶಾಸಕ ಕಾಮತ್ ಹೇಳಿದರು.
ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಶಾಸಕರಾದ ಡಿ.ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ವಿಧಾನಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಪ್ರತಾಪಸಿಂಹ ನಾಯಕ್, ರೈಲ್ವೆ ಪಾಲ್ಘಾಟ್ ವಿಭಾಗದ ಡಿಆರ್ ಎಂ ಮುಕುಂದ್, ಕಾರ್ಪೋರೇಟರ್ ಶೋಭಾ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.