Saturday, August 13, 2022

Latest Posts

ಚಿತ್ರದುರ್ಗ| ಸ್ವಾತಂತ್ರ್ಯದ 75 ವರ್ಷಗಳ ಸ್ಮರಣೋತ್ಸವ ಹೆಮ್ಮೆಯ ವಿಚಾರ: ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ

ಹೊಸದಿಗಂತ ವರದಿ, ಚಿತ್ರದುರ್ಗ:

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಕಾಂತ್ರಿಕಾರಿಗಳು, ಹೋರಾಟಗಾರರ ಸ್ಮರಣಾರ್ಥವಾಗಿ ಸ್ವಾತಂತ್ರ್ಯದ 75 ವರ್ಷಗಳ ಸ್ಮರಣೋತ್ಸವವನ್ನು ಐತಿಹಾಸಿಕ ಚಿತ್ರದುರ್ಗದಲ್ಲಿ ಆಚರಣೆ ಮಾಡುತ್ತಿರುವುದು ಹೆಮ್ಮೆಯ ವಿಚಾರ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.

ನೆಹರು ಯುವ ಕೇಂದ್ರ, ಪುರಾತತ್ವ ಇಲಾಖೆ ಮತ್ತು ದಾವಣಗೆರೆ ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸ್ವಯಂ ಸೇವಾ ಯೋಜನಾ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಕೋಟೆ ಆವರಣದಲ್ಲಿ ಹಮ್ಮಿಕೊಂಡಿದ್ದ ಭಾರತ ಸ್ವಾತಂತ್ರ್ಯದ ೭೫ ವರ್ಷಗಳ ಸ್ಮರಣೋತ್ಸವ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯದ 75 ವರ್ಷಗಳ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ದೇಶದ ೭೫ ಕಡೆಗಳಲ್ಲಿ ಆಚರಣೆ ಮಾಡಲಾಗುತ್ತಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಹಳ್ಳಿ-ಹಳ್ಳಿಗಳಲ್ಲೂ ವೀರಯೋಧರು ಹೋರಾಟ ಮಾಡಿದ್ದಾರೆ. ಅವರ ದೇಶಭಕ್ತಿ, ತ್ಯಾಗ, ಬಲಿದಾನದ ನೆನಪಿಗಾಗಿ ಈ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದರು.

ನೆಹರು ಯುವ ಕೇಂದ್ರದ ರಾಜ್ಯ ನಿರ್ದೇಶಕ ಅತುಲ್ ಜೆ.ನಿಕಮ್ ಮಾತನಾಡಿ, ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಅಹಮದಬಾದ್‌ನ ಸಬರಮತಿಯಲ್ಲಿ ಶುಕ್ರವಾರ ಚಾಲನೆ ನೀಡಿದರು. ಈ ಕಾರ್ಯಕ್ರಮವನ್ನು ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಹೋರಾಟಗಾರರ ಇತಿಹಾಸ ಸ್ಮರಿಸುವುದಾಗಿದೆ ಎಂದರು.

ನೆಹರು ಯುವ ಕೇಂದ್ರದ ಉಪನಿರ್ದೇಶಕ ಡಿ. ದಯಾನಂದ್ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಹೋರಾಟಗಾರರ ಶ್ರಮ, ತ್ಯಾಗದ ಬಗ್ಗೆ ಯುವ ಜನತೆಗೆ ತಿಳಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಇಂತಹ ಕಾರ್ಯಕ್ರಮಗಳಿಂದ ಯುವಜನತೆಗೆ ಉತ್ತಮ ಸಂದೇಶ ರವಾನೆಯಾಗಲಿ ಎಂದರು.

ಸ್ವಾತಂತ್ರ್ಯದ 75 ವರ್ಷಗಳ ಸ್ಮರಣೋತ್ಸದ ಅಂಗವಾಗಿ ದೇಶ ಭಕ್ತಿ ಮತ್ತು ದೇಶ ನಿರ್ಮಾಣ ವಿಷಯದ ಕುರಿತು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿ ಭಾಷಣ ಸ್ಪರ್ಧೆ, ರಾಷ್ಟ್ರೀಯ ಭಾವೈಕ್ಯತೆ ಮತ್ತು ಕೋಮುಸೌರ್ಹದತೆ ಕುರಿತು ಪ್ರಬಂಧ ಸ್ಪರ್ಧೆ, ಸ್ವಾತಂತ್ರ್ಯ ಚಳುವಳಿ ಕುರಿತು ಚಿತ್ರಕಲಾ ಸ್ಪರ್ಧೆ, ಸ್ವಚ್ಛತಾ ಕಾರ್ಯಕ್ರಮ ಕುರಿತು ಪರಾಂಪರಿಕ ನಡಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಪುರಾತತ್ವ ಇಲಾಖೆಯ ಅಧೀಕ್ಷಕ ಶಿವಕಾಂತ್ ಭಾಚ್‌ಪೆ, ಉಪಅಭಿಯಂತರ ಜೆ.ರಂಗನಾಥ್, ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ಎನ್.ಸುಹಾಸ್, ದಾವಣಗೆರೆ ವಿಶ್ವವಿದ್ಯಾಲಯ ಪ್ರಾಧ್ಯಾಪಕರು ಹಾಗೂ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss