ಹೊಸ ದಿಗಂತ ವರದಿ,ದಾವಣಗೆರೆ:
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ವ್ಯಾಪ್ತಿಯಲ್ಲಿರುವ ನಗರದ ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೇ 29, 30ರಂದು ಎರಡು ದಿನಗಳ ಕಾಲ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಕಾಲೇಜಿನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ತಿಳಿಸಿದರು.
ನಗರದ ಯುಬಿಡಿಟಿ ಕಾಲೇಜಿನಲ್ಲಿ ಗುರುವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 29ರಂದು ಜರುಗಲಿರುವ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾರತದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗವಹಿಸಲಿದ್ದಾರೆ. ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸಹಿತ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಾಲನಾಂದನಾಥ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನ ಪ್ರಮುಖ ಹಳೆಯ ವಿದ್ಯಾರ್ಥಿ ಹಾಗೂ ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್(ಎಐಸಿಟಿಇ) ಮಾಜಿ ಅಧ್ಯಕ್ಷ ಪ್ರೊ.ಟಿ.ಜಿ.ಸೀತಾರಾಮ್ ಪಾಲ್ಗೊಳ್ಳಲಿದ್ದಾರೆ ಎಂದರು.
ಅತಿಥಿಗೃಹ ನಿರ್ಮಾಣದ ಭೂಮಿಪೂಜೆ
ಅಮೃತ ಮಹೋತ್ಸವದ ಸಮಾರೋಪ ಸಮಾರಂಭವು ಮೇ 30ರಂದು ಸಂಜೆ 5.30ಕ್ಕೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಯುಬಿಡಿಟಿ ಹಳೇ ವಿದ್ಯಾರ್ಥಿ ಹಾಗೂ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ, ಮಾಜಿ ಸಂಸದ ಜನಾರ್ಧನಸ್ವಾಮಿ ಭಾಗವಹಿಸಲಿದ್ದಾರೆ. ಉದ್ಘಾಟನೆಯ ನಂತರ ಉದ್ಯಮಶೀಲತೆ ಹಾಗೂ ತಂತ್ರಜ್ಞಾನ ನವೀನತಾ ಪ್ರದರ್ಶನ, ಕಾಲೇಜಿನ ದಾನಿಗಳ ಪ್ರತಿಮೆಗಳ ಅನಾವರಣ ಇರುತ್ತದೆ. ಹಿಂದಿನ ಕುಲಪತಿಗಳು, ಕಾಲೇಜಿನ ನಿವೃತ್ತಿ ಹೊಂದಿದ ಪ್ರಾಚಾರ್ಯರು ಹಾಗೂ ಅಧ್ಯಾಪಕರುಗಳ ಸ್ಮರಣೆ, ಗೌರವ ಹಾಗೂ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಮಾರೋಪ ಸಮಾರಂಭದಲ್ಲಿ ಹಳೇ ವಿದ್ಯಾರ್ಥಿಗಳು ತಮ್ಮ ಅನಿಸಿಕೆ, ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. ಹಳೆ ವಿದ್ಯಾರ್ಥಿ ಸಂಘದ ಸದಸ್ಯರಿಂದ ಅತಿಥಿಗೃಹ ನಿರ್ಮಾಣದ ಭೂಮಿಪೂಜೆ ಮತ್ತು ಶಂಕುಸ್ಥಾಪನೆ ನೆರವೇರಲಿದೆ. ಇದೇ ವೇಳೆ ಕಾಲೇಜು 75 ವರ್ಷ ನಡೆದು ಬಂದ ದಾರಿ ಕುರಿತು ಸಾಕ್ಷ್ಯಚಿತ್ರ ಪ್ರದರ್ಶನ ಜರುಗಲಿದೆ ಎಂದು ಅವರು ತಿಳಿಸಿದರು.
ವಿಟಿಯು ಕುಲಸಚಿವ(ಮೌಲ್ಯಮಾಪನ) ಡಾ.ಪ್ರಸಾದ್ ಬಿ.ರಾಂಪುರೆ, ಯುಬಿಡಿಟಿ ಕಾಲೇಜಿನ ಪ್ರಾಂಶುಪಾಲ ಡಾ.ಡಿ.ಪಿ.ನಾಗರಾಜಪ್ಪ, ಅಮೃತ ಮಹೊತ್ಸವದ ಸಂಚಾಲಕ ಡಾ.ಎಂ.ಹೆಚ್.ದಿವಾಕರ್ ಇತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.



