ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ನೀರಿಗಾಗಿ ಗಲಾಟೆ ಶುರುವಾಗಿದೆ. ವಾಡಿಕೆಯಷ್ಟು ಮಳೆ ಬರಲಿಲ್ಲವಾದರೂ ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ಸುಪ್ರೀಂ ಕೋರ್ಟ್ ತೀರ್ಪಿನಂತೆ ನೀರು ಬಿಟ್ಟಿದ್ದೇವೆ ಎಂದು ಕಾಂಗ್ರೆಸ್ ಹೇಳಿದ್ದರೂ, ವಿಪಕ್ಷಗಳನ್ನು ಹಾಗೂ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವಿಪಕ್ಷಗಳು ಆರೋಪಿಸಿವೆ.
ಈ ಬೆನ್ನಲ್ಲೇ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟಕಡಿಮೆಯಾಗುತ್ತಿದ್ದು, ಇನ್ನು ನೀರು ಬಿಡಲು ಆಗುವುದಿಲ್ಲ ಎಂದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಈ ಬಗ್ಗೆ ಹೊಸ ಪೀಠ ರಚಿಸುವುದಾಗಿ ಸುಪ್ರೀಂ ಹೇಳಿದೆ.
ಕಾವೇರಿ ನೀರು ವಿವಾದ, ಮಹದಾಯಿ ಹಾಗೂ ಕಳಸಾ ಬಂಡೂರಿ ವಿಚಾರವಾಗಿ ಇಂದು ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದೆ. ವಿಪಕ್ಷಗಳ ಮಾಜಿ ಸಿಎಂಗಳನ್ನು ಸಭೆಗೆ ಆಹ್ವಾನಿಸಲಾಗಿದೆ.
ವಿಧಾನಸೌಧದಲ್ಲಿ ಸಭೆ ನಡೆಯಲಿದ್ದು, ಮಾಜಿ ಸಿಎಂ ಬಿಎಸ್‌ವೈ, ಬಸವರಾಜ ಬೊಮ್ಮಾಯಿ ಹಾಗೂ ಡಿ.ವಿ. ಸದಾನಂದಗೌಡ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಗೋವಿಂದ ಕಾರಜೋಳ ಅವರನ್ನು ಆಹ್ವಾನಿಸಲಾಗಿದೆ.