ಶೂ ಪಾಲಿಷ್ ಮಾಡಿ ಅತಿಥಿ ಉಪನ್ಯಾಸಕರಿಂದ ವಿನೂತನ ಪ್ರತಿಭಟನೆ

ದಿಗಂತ ವರದಿ ಮಂಡ್ಯ :

ಅತಿಥಿ ಉಪನ್ಯಾಸಕರ ಸೇವೆ ವಿಲೀನ ಹಾಗೂ ಸಹಾಯಕ ಪ್ರಾಧ್ಯಾಪಕರ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಾತಿ ತಡೆಹಿಡಿಯಲು ಆಗ್ರಹಿಸಿ ಅತಿಥಿ ಉಪನ್ಯಾಸಕರು ಇಂದು ಶೂ ಪಾಲೀಷ್ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ನಿನ್ನೆಯಿಂದ ಧರಣಿ ಸತ್ಯಾಗ್ರಹ ಆರಂಭಿಸಿರುವ ಅತಿಥಿ ಉಪನ್ಯಾಸಕರು ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದಿರುವ ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ವಿಲೀನಗೊಳಿಸುವ ಸಂಬಂಧ ಕರ್ನಾಟಕ ನಾಗರೀಕ ಸೇವೆ ಕೆಸಿಎಸ್ 1977 ಮತ್ತು 14ರ ಅಡಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು ವಿಲೀನಗೊಳಿಸುವುದು ಮತ್ತು ನಿಯಮ ಬಾಹಿರ 2021ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆಯನ್ನು ತಡೆಹಿಡಿದು ಕಾಲೇಜು ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ಸೇವಾ ವಿಲೀನ ಸಂಬಂಧ ಈ ಹಿಂದೆ ಕೈಗೊಂಡ ನಿರ್ಣಯಗಳ ಕಡತವನ್ನು ಸದನದಲ್ಲಿ ಮಂಡಿಸಿ ಚರ್ಚಿಸಿ ಸೂಕ್ತ ನಿರ್ಣಯ ಕೈಗೊಳ್ಳುವಂತೆ ಒತ್ತಾಯಿಸಿದರು.
ಅತಿಥಿ ಉಪನ್ಯಾಸಕರ ಸೇವಾ ವಿಲೀನ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸೆ. 30ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆಯನ್ನು ತಡೆಹಿಡಿಯಬೇಕು ಎಂದು ಆಗ್ರಹಿಸಿ ಸಾರ್ವಜನಿಕರ ಶೂ, ಚಪ್ಪಲಿಗಳನ್ನು ಪಾಲೀಷ್ ಮಾಡುವ ಮೂಲಕ ಪ್ರತಿಭಟಿಸಿದರು.
ಅತಿಥಿ ಉಪನ್ಯಾಸಕರ ಸಂಘದ ಮುಖಂಡರಾದ ನಾಗರಾಜು, ರಮೇಶ್, ರಮ್ಯಾಘಿ, ಹರ್ಷಿತಾ, ಶೃತಿ, ಮಹೇಶ್, ಸಂಗೀತಾ, ಮಲ್ಲೇಶ್, ದಿವಾಕರ್, ರಜನೀಶ್, ಮಹಾಂತೇಶ್ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!