ಹೊಸದಿಗಂತ ಡಿಜಿಟಲ್ ಡೆಸ್ಕ್:
ಬ್ರಹ್ಮಾವರ ತಾಲೂಕಿನ ಬಾಳೆಕುದ್ರು ಮಠಕ್ಕೆ ಸೇರಿದ ಪ್ರಾಚೀನ ವಿಗ್ರಹಗಳನ್ನು ಬೆಂಗಳೂರಿನ ಕಂಪನಿಯೊಂದಕ್ಕೆ ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.
ಪ್ರಕರಣದಲ್ಲಿ ಹೆಸರಿಸಲಾದ ಮಠದ ಪೀಠಾಧಿಪತಿ ಶ್ರೀ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿ ನಾಪತ್ತೆಯಾಗಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ವಿಗ್ರಹಗಳನ್ನು ಖರೀದಿಸಿದರೆನ್ನಲಾದ ಕಂಪನಿಯ ಮಾಲೀಕ ನಾಗೇಂದ್ರ ಪ್ರಸಾದ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಎಫ್ಐಆರ್ನಲ್ಲಿ ಸ್ವಾಮೀಜಿ ಸೇರಿದಂತೆ ಕೆಲವು ಮಠದ ಆಡಳಿತಾಧಿಕಾರಿಗಳ ಹೆಸರುಗಳನ್ನು ಉಲ್ಲೇಖಿಸಲಾಗಿದೆ.
ಪ್ರಕರಣ ದಾಖಲಾದ ಬಳಿಕ ಸ್ವಾಮೀಜಿ ಮಠಕ್ಕೆ ಬೀಗ ಹಾಕಿ ತೆರಳಿದ್ದಾರೆ ಎನ್ನಲಾಗಿದ್ದು, ಅವರ ಇರುವಿಕೆ ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಈ ನಡುವೆ, ಪ್ರಾಚೀನ ವಿಗ್ರಹಗಳನ್ನು ಮಠಕ್ಕೆ ಮರಳಿಸಬೇಕು ಹಾಗೂ ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಭಕ್ತರು ಒತ್ತಾಯಿಸಿದ್ದಾರೆ.



