ಹೊಸದಿಗಂತ ಡಿಜಿಟಲ್ ಡೆಸ್ಕ್:
ತಿರುಪತಿ ಲಡ್ಡು ತಯಾರಿಸಲು ಬಳಸಿದ ತುಪ್ಪದಲ್ಲಿ ನಿಜವಾಗಿ ಪ್ರಾಣಿಗಳ ಕೊಬ್ಬು ಬಳಸಲಾಗುತ್ತಿದೆಯೇ ಎಂದು ತಿಳಿಯಲು ಕೂಡಲೇ ಸಿಬಿಐ ತನಿಖೆಗೆ ಆದೇಶಿಸುವಂತೆ ಒತ್ತಾಯಿಸಿ ಆಂಧ್ರಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ವೈ.ಎಸ್.ಶರ್ಮಿಳಾ ಅವರು ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.
ಬುಧವಾರ ನಡೆದ ಎನ್‌ಡಿಎ ಸಭೆಯಲ್ಲಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ವೈಎಸ್‌ಆರ್‌ಸಿಪಿ ಆಡಳಿತವು ತಿರುಪತಿ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಿದೆ ಎಂದು ಪ್ರತಿಪಾದಿಸುವ ಮೂಲಕ ವಿವಾದವನ್ನು ಹುಟ್ಟುಹಾಕಿದರು.
ತಿರುಪತಿ ಲಡ್ಡು ಪ್ರಸಾದ ತಯಾರಿಸಲು ಬಳಸಿದ ತುಪ್ಪದಲ್ಲಿ ದನ ಹಾಗೂ ಹಂದಿ ಮಾಂಸದ ಕೊಬ್ಬು, ಮೀನಿನ ಎಣ್ಣೆ ಅಲ್ಲದೆ ಪಾಮ್ ಆಯಿಲ್, ಸೂರ್ಯಕಾಂತಿ ಮತ್ತು ಸೋಯಾಬೀನ್ ಮುಂತಾದ ಅಂಶಗಳು ಇರುವುದು ಲ್ಯಾಬ್ ಪರೀಕ್ಷೆಯಿಂದ ಬಹಿರಂಗವಾಗಿದೆ. ಆಂಧ್ರ ಸಿಎಂ ಹೇಳಿಕೆಯಿಂದ ತಿರುಪತಿಯ ಕೋಟ್ಯಂತರ ಭಕ್ತರ ಭಾವನೆಗೆ ಘಾಸಿಯಾಗಿದೆ. ಹಾಗಾಗಿ ಆಂಧ್ರ ಸರ್ಕಾರ ಕೂಡಲೇ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲಿ ಎಂದು ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷೆ ವೈಎಸ್ ಶರ್ವಿುಳಾ ಆಗ್ರಹಿಸಿದ್ದಾರೆ.