June 4, 2026
Thursday, June 4, 2026
spot_img

ಚೆನ್ನೈನಲ್ಲಿ ನಾಳೆ ಅಣ್ಣಾಮಲೈ ಮಹತ್ವದ ಸುದ್ದಿಗೋಷ್ಠಿ: ಕುತೂಹಲ ಮೂಡಿಸಿದ ‘X’ ಪೋಸ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡು ರಾಜಕಾರಣದಲ್ಲಿ ಬಿಜೆಪಿಯ ಪ್ರಮುಖ ಮುಖವಾಗಿ ಗುರುತಿಸಿಕೊಂಡಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಕೇಸರಿ ಪಡಿಗೆ ದಿಢೀರ್ ವಿದಾಯ ಹೇಳಲು ಮುಂದಾಗಿದ್ದಾರೆ. ಜೂನ್ 5 ರಂದು ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಲಿದ್ದಾರೆ ಎಂಬ ವರದಿಗಳು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿವೆ.

ಜೂನ್ 5 ರಂದು ಮಹತ್ವದ ಪ್ರಕಟಣೆ

ನಾಳೆ ಮಧ್ಯಾಹ್ನ 12 ಗಂಟೆಗೆ ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಅಣ್ಣಾಮಲೈ ಅವರು ವಿಶೇಷ ಸುದ್ದಿಗೋಷ್ಠಿಯನ್ನು ಹಮ್ಮಿಕೊಂಡಿದ್ದಾರೆ. ಮೂಲಗಳ ಪ್ರಕಾರ, ಇದೇ ಸಭೆಯಲ್ಲಿ ಅವರು ತಮ್ಮ ರಾಜೀನಾಮೆಯನ್ನು ಸಾರ್ವಜನಿಕವಾಗಿ ಘೋಷಿಸಿ, ತಮ್ಮ ಮುಂದಿನ ರಾಜಕೀಯ ಭವಿಷ್ಯದ ರಣತಂತ್ರವನ್ನು ಹಂಚಿಕೊಳ್ಳಲಿದ್ದಾರೆ. ಈ ನಡುವೆ ತಮ್ಮ ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, “ನನ್ನ ಆಲೋಚನೆಗಳನ್ನು ಹಂಚಿಕೊಳ್ಳಲು ಮತ್ತು ನಿಮ್ಮೆಲ್ಲರೊಂದಿಗೆ ಮುಕ್ತ ಸಂವಾದ ನಡೆಸಲು ಎದುರು ನೋಡುತ್ತಿದ್ದೇನೆ” ಎಂದು ಬರೆದುಕೊಂಡಿರುವುದು ತೀವ್ರ ಕುತೂಹಲ ಕೆರಳಿಸಿದೆ.

ದೆಹಲಿಯಲ್ಲಿ ನಡೆದ ಹೈವೋಲ್ಟೇಜ್ ಸಭೆಗಳು

ಕಳೆದ ಎರಡು ದಿನಗಳ ಹಿಂದಷ್ಟೇ ದೆಹಲಿಗೆ ಭೇಟಿ ನೀಡಿದ್ದ ಅಣ್ಣಾಮಲೈ, ಬಿಜೆಪಿಯ ರಾಷ್ಟ್ರೀಯ ಉಸ್ತುವಾರಿ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ಈಗಾಗಲೇ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ. ಇದರ ಬೆನ್ನಲ್ಲೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನೂ ಭೇಟಿಯಾಗಿ ಮಾತುಕತೆ ನಡೆಸಿದ್ದರು.

ಅತ್ಯಂತ ಪ್ರಮುಖವಾಗಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿದ್ದ ಅಣ್ಣಾಮಲೈ, ತಾವು ಪಕ್ಷ ತೊರೆಯುತ್ತಿರುವ ನಿರ್ಧಾರವನ್ನು ವರಿಷ್ಠರ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ. ಆದರೆ, ಭವಿಷ್ಯದಲ್ಲಿ ಅಗತ್ಯ ಬಿದ್ದರೆ ರಾಷ್ಟ್ರೀಯ ಹಿತದೃಷ್ಟಿಯಿಂದ ಒಟ್ಟಿಗೆ ಕೆಲಸ ಮಾಡಲು ಸದಾ ಸಿದ್ಧವಿರುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ತಮಿಳುನಾಡಿನಲ್ಲಿ ಹಿಂದುತ್ವದ ರಾಜಕಾರಣಕ್ಕೆ ಹೊಸ ಶಕ್ತಿ ತುಂಬಿದ್ದ ಅಣ್ಣಾಮಲೈ ಅವರ ಈ ದಿಢೀರ್ ನಡೆ, ದಕ್ಷಿಣ ಭಾರತದ ರಾಜಕೀಯದಲ್ಲಿ ಹೊಸದೊಂದು ಪ್ರಾದೇಶಿಕ ಪರ್ವಕ್ಕೆ ಮುನ್ನುಡಿ ಬರೆಯಲಿದೆಯೇ ಎಂಬ ಚರ್ಚೆಗಳು ಆರಂಭವಾಗಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !