ಹೊಸದಿಗಂತ ಡಿಜಿಟಲ್ ಡೆಸ್ಕ್:
ಗರ್ಭಕಂಠದ ಕ್ಯಾನ್ಸರ್ ತಡೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದ್ದು, 14 ವರ್ಷದ ಎಲ್ಲಾ ಬಾಲಕಿಯರಿಗೆ ಉಚಿತ ಲಸಿಕೆ ನೀಡುವುದಾಗಿ ಘೋಷಣೆ ಮಾಡಿದೆ.
ಮಹಿಳೆಯರಲ್ಲಿ ಹೆಚ್ಚಾಗಿ ಗರ್ಭಕಂಠ ಮತ್ತು ಸ್ತನ ಕ್ಯಾನ್ಸರ್ ಪತ್ತೆಯಾಗುತ್ತಿದೆ. ಗರ್ಭಕಂಠ ಕ್ಯಾನ್ಸರ್ ನಿರ್ಮೂಲನೆಗೆ ಎಚ್‌ಪಿವಿ ಲಸಿಕೆ ಸಹಕಾರಿ. ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ಈ ಲಸಿಕೆ ಸೇರ್ಪಡೆ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇದು ಕಾರ್ಯಗತವಾಗುವ ವಿಶ್ವಾಸವಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನವದೆಹಲಿ, ಪಂಜಾಬ್ ಮತ್ತು ಸಿಕ್ಕಿಂ ರಾಜ್ಯದಲ್ಲಿ ಶಾಲಾ ಹಂತದಲ್ಲಿಯೇ ವಿದ್ಯಾರ್ಥಿನಿಯರಿಗೆ ಲಸಿಕೆ ನೀಡಲಾಗುತ್ತಿದೆ. ನಮ್ಮ ರಾಜ್ಯದಲ್ಲಿಯೂ ಈ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಜೊತೆಗೆ ಚರ್ಚಿಸಿ, ಈ ಬಾರಿಯ ಬಜೆಟ್‌ನಲ್ಲಿ ಘೋಷಿಸಲಾಗಿದೆ ಎಂದು ಹೇಳಿದರು.
ಹದಿಹರೆಯದ ಹೆಣ್ಣು ಮಕ್ಕಳಿಗೆ ಎಚ್‍ಪಿವಿ ಲಸಿಕೆ ಹಾಕುವುದರಿಂದ ಭವಿಷ್ಯದಲ್ಲಿ ಅವರಿಗೆ ಎದುರಾಗಬಹುದಾದ ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಬಹುದು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇದರ ಪ್ರಾಯೋಗಿಕ ಅನುಷ್ಠಾನಕ್ಕೆ ಸಂಬಂಧಿಸಿದ ಪ್ರಸ್ತಾವವು ಸರಕಾರದ ಮುಂದಿದ್ದು, ಶೀಘ್ರವೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.