ಹೊಸದಿಗಂತ ಡಿಜಿಟಲ್ ಡೆಸ್ಕ್:
ಎತ್ತಿನಹೊಳೆ ನಾಲೆಯ ಕಾಮಗಾರಿ ಬಳಿ ತೆಗೆದಿದ್ದ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಮೃತಪಟ್ಟಿದ್ದಾರೆ. ಹುಚ್ಚನಹಟ್ಟಿ ಗ್ರಾಮದ ಯದುವೀರ್ (8) ಹಾಗೂ ಮನೋಹರ್ (10) ಮೃತ ದುರ್ದೈವಿಗಳು.
ನಗರಕ್ಕೆ ಹೊಂದಿಕೊಂಡಿರುವ ಹುಚ್ಚನಹಟ್ಟಿ ಗ್ರಾಮದ ಬಳಿ ಎತ್ತಿನಹೊಳೆ ನೀರಾವರಿ ಯೋಜನೆ ಕಾಮಗಾರಿ ನಡೆಯುತ್ತಿದ್ದು, ಸ್ಥಳದಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಸ್ಥಳಕ್ಕೆ ಹೋಗಿದ್ದ ಮಕ್ಕಳು ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಗುರುವಾರ ಸಂಜೆ ಶಾಲೆ ಮುಗಿಸಿಕೊಂಡು ಮನೆಗೆ ಬಂದಿದ್ದ ಮಕ್ಕಳು, ನಂತರ ಹೊರ ಹೋಗಿದ್ದರು. ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಆತಂಕಗೊಂಡ ಪೋಷಕರು ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಶುಕ್ರವಾರ ಬೆಳಿಗ್ಗೆ ಇಬ್ಬರು ಬಾಲಕರ ಶವ ಪತ್ತೆಯಾಗಿದೆ.