ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಗುರುತನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ಆರೋಪದ ಮೇಲೆ ಅವರ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಈ ಹಿಂದೆ ಮುನಿರತ್ನ ವಿರುದ್ಧ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ದೂರು ದಾಖಲಿಸಿದ್ದ ಸಂತ್ರಸ್ತೆಯೇ ಇದೀಗ ಹೊಸದಾಗಿ ದೂರು ನೀಡಿದ್ದಾರೆ.
ಬಿಜೆಪಿ ಕಚೇರಿ ಉದ್ಘಾಟನಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಮುನಿರತ್ನ ಅವರು, ತಮ್ಮ ಕುಟುಂಬದ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸುವ ಮೂಲಕ ತಮ್ಮ ಗುರುತು ಪತ್ತೆಯಾಗುವಂತೆ ಮಾಡಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಅಲ್ಲದೆ, ಸಾರ್ವಜನಿಕವಾಗಿ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಐದು ವರ್ಷಗಳ ಹಿಂದೆ ನಡೆದ ಘಟನೆಗೆ ಸಂಬಂಧಿಸಿದಂತೆ 52 ಕಿ.ಮೀ. ದೂರದ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವುದನ್ನು ಪ್ರಶ್ನಿಸಿ ಮುನಿರತ್ನ ಮಾತನಾಡಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.
ಒಮ್ಮೆ ಅತ್ಯಾಚಾರವಾದ ಬಳಿಕ ಮತ್ತೆ ಕಾರು, ವಿಧಾನಸೌಧ, ಮನೆ ಹಾಗೂ ಗೋಡೌನ್ಗೆ ಏಕೆ ಹೋದರು? ಎಂಬರ್ಥದಲ್ಲಿ ಸಾರ್ವಜನಿಕವಾಗಿ ಮಾತನಾಡುವ ಮೂಲಕ ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ತಂದಿದ್ದಾರೆ. ತಾವು ಓಡಾಡುವ ಸ್ಥಳಗಳಲ್ಲಿಯೂ ತಮ್ಮ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ. ಇದಲ್ಲದೆ, ತಮ್ಮ ಕುಟುಂಬದ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಿ ಬೆದರಿಕೆ ಹಾಕಲಾಗಿದೆ ಎಂಬ ಆರೋಪವನ್ನೂ ಮಾಡಿದ್ದಾರೆ.
ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಯಶವಂತಪುರ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಸೆಕ್ಷನ್ 72 ಮತ್ತು 351(2) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸುವುದು ಕಾನೂನುಬಾಹಿರವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ. ಈ ಹೊಸ ಎಫ್ಐಆರ್ನಿಂದ ಶಾಸಕ ಮುನಿರತ್ನ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾದಂತಾಗಿದೆ.



