ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮಳೆಯ ಅಬ್ಬರ ತಗ್ಗಿ ಒಣಹವೆಯ ವಾತಾವರಣ ಕಂಡುಬರುತ್ತಿರುವ ಬೆನ್ನಲ್ಲೇ, ಮತ್ತೆ ಕೆಲ ಜಿಲ್ಲೆಗಳಲ್ಲಿ ವರುಣನ ಆಗಮನವಾಗುವ ಮುನ್ಸೂಚನೆ ದೊರೆತಿದೆ.
ನವೆಂಬರ್ 8 ಮತ್ತು 9ರಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗಾದರೆ ಯಾವ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ? ಬೆಂಗಳೂರಿನ ಹವಾಮಾನ ಹೇಗಿರಲಿದೆ? ಇಲ್ಲಿದೆ ಹವಾಮಾನ ಇಲಾಖೆಯ ಮುನ್ಸೂಚನೆ.
ಕರಾವಳಿ ಜಿಲ್ಲೆಗಳಲ್ಲಿ ತುಂತುರು ಮಳೆ
ನವೆಂಬರ್ 8ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 9ರಂದು ದಕ್ಷಿಣ ಕನ್ನಡದ ಒಂದೆರಡು ಸ್ಥಳಗಳಲ್ಲಿ ಮಳೆ ಸುರಿಯುವ ನಿರೀಕ್ಷೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡೂ ದಿನ ಮುಖ್ಯವಾಗಿ ಒಣಹವೆಯ ವಾತಾವರಣ ಇರಲಿದೆ.
ದಕ್ಷಿಣ ಒಳನಾಡಿನಲ್ಲಿ ಎಲ್ಲೆಲ್ಲಿ ಮಳೆ?
ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ನವೆಂಬರ್ 8ರಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 9ರಂದು ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಮಳೆಯಾಗಬಹುದು ಎಂದು ಮುನ್ಸೂಚನೆ ತಿಳಿಸಿದೆ.
ಬೆಂಗಳೂರಿನಲ್ಲಿ ಮಳೆ ಬರುತ್ತಾ?
ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಮಳೆಯ ಮುನ್ಸೂಚನೆ ಇಲ್ಲ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.
ರಾಜ್ಯದ ಎಲ್ಲಾ ಭಾಗಗಳಲ್ಲೂ ಒಂದೇ ರೀತಿಯ ಹವಾಮಾನ ಇರದೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆಯ ಸಾಧ್ಯತೆಯಿದೆ.



