ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲ್ಕತ್ತಾ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಸಂಜಯ್ ರಾಯ್ಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಈ ಘಟನೆ ಮಾಸುವ ಮುನ್ನವೇ ಕಾಲೇಜಿನಲ್ಲಿ ಮತ್ತೊಂದು ಘಟನೆ ನಡೆದಿದ್ದು, ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ 20 ವರ್ಷದ ದ್ವಿತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಐವಿ ಪ್ರಸಾದ್ ಎಂಬಾಕೆ ಕಮರ್ಹಟಿ ಇಎಸ್‌ಐ ಆಸ್ಪತ್ರೆಯ ಕ್ವಾರ್ಟರ್ಸ್‌ನಲ್ಲಿರುವ ತನ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಕೆಯ ತಾಯಿ ಕಮರ್ಹಟಿ ಇಎಸ್‌ಐ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದಾರೆ. ಮೃತಳ ತಂದೆ ಮುಂಬೈನಲ್ಲಿ ಹಿರಿಯ ಬ್ಯಾಂಕ್ ಅಧಿಕಾರಿಯಾಗಿದ್ದಾರೆ.
ಪೊಲೀಸರ ಪ್ರಕಾರ, ಸಂತ್ರಸ್ತೆ ತನ್ನ ಕೋಣೆಯಲ್ಲಿ ಒಬ್ಬಳೇ ಇದ್ದಳು. ಆಕೆ ಫೋನ್ ಕರೆಗಳಿಗೆ ಪ್ರತಿಕ್ರಿಯಿಸದಿದ್ದಾಗ, ಆತಂಕಗೊಂಡ ಆಕೆಯ ತಾಯಿ ಬಾಗಿಲು ತೆರೆದಾಗ ಶುಕ್ರವಾರ ರಾತ್ರಿ ಸೀಲಿಂಗ್‌ಗೆ ನೇಣು ಹಾಕಿಕೊಂಡಿರುವುದು ಪತ್ತೆಯಾಗಿದೆ.
ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಸಾವನ್ನಪ್ಪಿದ್ದಾಳೆ ಎಂದು ಘೋಷಿಸಲಾಯಿತು ಎಂದು ಬ್ಯಾರಕ್‌ಪೋರ್ ಕಮಿಷನರೇಟ್‌ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ದೇಹವನ್ನು ಕಾಲೇಜ್ ಆಫ್ ಮೆಡಿಸಿನ್ ಮತ್ತು ಸಾಗೋರ್ ದತ್ತಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.