ಹೊಸ ದಿಗಂತ ವರದಿ, ಮಡಿಕೇರಿ:
ಮೈಕ್ರೋ ಫೈನಾನ್ಸ್ ಕಿರುಕುಳ ತಾಳಲಾರದೆ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಕೊಡಗಿನ ಶನಿವಾರಸಂತೆಯಲ್ಲಿ ನಡೆದಿದೆ.
ಶನಿವಾರಸಂತೆಯ ಗುಂಡೂರಾವ್ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಹಸೀನಾ (50) ಎಂಬಾಕೆಯೇ ಬುಧವಾರ ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.
ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಈ ಮಹಿಳೆ 3-4 ಸಂಘಗಳಲ್ಲಿ ಸಾಲ ಮಾಡಿಕೊಂಡಿದ್ದರೆನ್ನಲಾಗಿದ್ದು, ತಿಂಗಳಿಗೆ 40ಸಾವಿರ ರೂ.ಗಳನ್ನು ಪಾವತಿಸಬೇಕಾಗಿತ್ತೆಂದು ಹೇಳಲಾಗಿದೆ.
ಮಹಿಳೆಗೆ ಮೂವರು ಮಕ್ಕಳಿದ್ದು, ಪುತ್ರಿಯನ್ನು ಕೇರಳಕ್ಕೆ ವಿವಾಹ ಮಾಡಿಕೊಟ್ಟಿದ್ದಾರೆ. ಇನ್ನಿಬ್ಬರು ಗಂಡುಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ.
ಪತಿ ಗಾರೆ ಕೆಲಸಕ್ಕೆ ತೆರಳಿದ್ದ ಸಂದರ್ಭ ಮನೆಯ ಬಚ್ಚಲುಮನೆಯಲ್ಲಿ ಆಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶನಿವಾರಸಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.