ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ- ಮಂಥರ್ ಸಹಿತ ಹಲವರಿಂದ ನಾಮಪತ್ರ ಸಲ್ಲಿಕೆ

ಹೊಸದಿಗಂತ ವರದಿ ಮಡಿಕೇರಿ:

ವಿಧಾನಸಭಾ‌ ಚುನಾವಣೆಗೆ ಸಂಬಂಧಿಸಿದಂತೆ‌ ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಎಂ.ಪಿ.ಅಪ್ಪಚ್ಚುರಂಜನ್ ಹಾಗೂ ವೀರಾಜಪೇಟೆ ಕ್ಷೇತ್ರದ ಅಭ್ಯರ್ಥಿ ಕೆ.ಜಿ.ಬೋಪಯ್ಯ ಅವರು ಸೋಮವಾರ‌ ತಮ್ಮ ನಾಮಪತ್ರ ಸಲ್ಲಿಸಿದರು.

ಇದರೊಂದಿಗೆ ಮಡಿಕೇರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಮಂಥರ್ ಗೌಡ ಹಾಗೂ ಹಲವು ಪಕ್ಷೇತರ ಅಭ್ಯರ್ಥಿಗಳೂ ಸೋಮವಾರ ತಮ್ಮ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಇದಕ್ಕೂ ಮುನ್ನ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ ಅಭ್ಯರ್ಥಿಗಳಿಬ್ಬರೂ ನೂರಾರು ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ಸಾಗಿ ತಮ್ಮ ಉಮೇದುವಾರಿಕೆಯನ್ನು ಆಯಾ ಕ್ಷೇತ್ರದ ಚುನಾವಣಾಧಿಕಾರಿಗಳಿಗೆ ಸಲ್ಲಿಸಿದರು.

ಮಡಿಕೇರಿಯ ಚೌಡೇಶ್ವರಿ ದೇವಾಲಯದಲ್ಲಿ ಮೊದಲಿಗೆ ಪೂಜೆ ಸಲ್ಲಿಸಿದ ಅಪ್ಪಚ್ಚುರಂಜನ್ ಅವರು ಅಲ್ಲಿಂದ ಮೆರವಣಿಗೆ ಮೂಲಕ ಗಾಂಧಿ ಮೈದಾನದವರೆಗೂ ಸಾಗಿದರು‌. ಅಲ್ಲಿಂದ ಜಿಲ್ಲಾಡಳಿತ ಭವನದಲ್ಲಿರುವ ಚುನಾವಣಾಧಿಕಾರಿಗಳ‌ ಕಚೇರಿಗೆ ತೆರಳಿ ಚುನಾವಣಾಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್. ಜಿ ಮೇದಪ್ಪ, ವಕೀಲರು ಹಾಗೂ ಬಿಜೆಪಿ ಮುಖಂಡರೂ ಆಗಿರುವ ಅಭಿಮನ್ಯುಕುಮಾರ್, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್ ಮತ್ತಿತರರು ಹಾಜರಿದ್ದರು.
ಈ ನಡುವೆ ಪೂರ್ವಾನುಮತಿ ಪಡೆಯದೆ ಪಕ್ಷದ ಧ್ವಜವನ್ನು ಹಾಕಿದ್ದ ಕಾಂಡನಕೊಲ್ಲಿಯ ತೇಜ ಎಂಬವರಿಗೆ ಸೇರಿದ ವಾಹನವನ್ನು ಪೊಲೀಸರು ವಶಕ್ಕೆ ಪಡೆದ ಘಟನೆಯೂ ನಡೆಯಿತು.
ಮಂಥರ್ ಗೌಡ: ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂಥರ್ ಗೌಡ ಅವರು ಕೂಡಾ ಸೋಮವಾರ ನಾಮಪತ್ರ ಸಲ್ಲಿಸಿದರು.

ಪಕ್ಷದ ಪ್ರಮುಖರೊಂದಿಗೆ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಮಂಥರ್ ಗೌಡ, ಮಡಿಕೇರಿ ಕ್ಷೇತ್ರದ ಚುನಾವಣಾಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಕಾಂಗ್ರೆಸ್ ಪ್ರಮುಖರಾದ ಹೆಚ್.ಎಸ್.ಚಂದ್ರಮೌಳಿ, ಕೆ.ಎಂ. ಲೋಕೇಶ್, ಮಂಥರ್ ಗೌಡ ಅವರ ಪತ್ನಿ ಭವ್ಯಾ ಹಾಜರಿದ್ದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಡಾ.ಮಂಥರ್ ಗೌಡ ಅವರು ತಮ್ಮ ನಿವಾಸದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿ ನಂತರ ನಗರದ ಚೌಡೇಶ್ವರಿ ದೇವಾಲಯ ಬಳಿಯಿಂದ ಗಾಂಧಿ ಮೈದಾನದವರೆಗೆ ಪಕ್ಷದ ನೂರಾರು ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ನಡೆಸಿದರು.

ಜಿ.ಜಿ.ಹೇಮಂತ್: ಪಕ್ಷೇತರ ಅಭ್ಯರ್ಥಿಯಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಗರಗಂದೂರು ಗ್ರಾಮದ ಜಿ.ಜಿ.ಹೇಮಂತ್ ಕುಮಾರ್ ನಾಮಪತ್ರ ಸಲ್ಲಿಸಿದರು. ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿದ ಹೇಮಂತ್ ಕುಮಾರ್ ಮಡಿಕೇರಿ ಕ್ಷೇತ್ರದ ಚುನಾವಣಾಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಕ್ಷೇತ್ರದ ಮತದಾರರು ಬದಲಾವಣೆಯನ್ನು ಬಯಸಿದ್ದಾರೆ. ಕಳೆದ 30 ವರ್ಷಗಳಿಂದ ಬಿಜೆಪಿಯ ಪ್ರಾಮಾಣಿಕ ಕಾರ್ಯಕರ್ತನಾಗಿ ಕಾರ್ಯ ನಿರ್ವಹಿಸಿದ್ದೇನೆ. ಆದರೆ ಬಿಜೆಪಿಯಲ್ಲಿ ನೈಜ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ. ಆದ್ದರಿಂದ ಮನನೊಂದು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ವೀರಾಜಪೇಟೆ ಕ್ಷೇತ್ರ: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೆ.ಜಿ ಬೋಪಯ್ಯ ಅವರು ವೀರಾಜಪೇಟೆಯಲ್ಲಿ ನಾಮಪತ್ರ ಸಲ್ಲಿಸಿದರು.
ವೀರಾಜಪೇಟೆಯ ಶ್ರೀಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ತೆಲುಗರ ಬೀದಿಯ ಮಾರಿಯಮ್ಮ ದೇವಾಲಯದಿಂದ ಬೃಹತ್ ಮೆರವಣಿಗೆಯಲ್ಲಿ ಅಲ್ಲಿನ ತಾಲೂಕು ಕಚೇರಿವರೆಗೆ ಸಾಗಿದ ಬೋಪಯ್ಯ, ಅಲ್ಲಿ ಕ್ಷೇತ್ರದ ಚುನಾವಣಾಧಿಕಾರಿ ಶಬಾನ ಎಂ ಶೇಕ್ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುಜ ಕುಶಾಲಪ್ಪ, ಪಟ್ರಪಂಡ ರಘು ನಾಣ್ಣಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ವೀರಾಜಪೇಟೆ ತಾಲೂಕು ಅಧ್ಯಕ್ಷ ನೆಲ್ಲಿರ ಚಲನ್ ಹಾಜರಿದ್ದರು.

ನಾಮಪತ್ರ ಸಲ್ಲಿಸುವ ಸಂದರ್ಭ ಪತ್ರಕರ್ತರಿಗೆ ಕೊಠಡಿಯೊಳಗೆ ಪ್ರವೇಶಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಪತ್ರಕರ್ತರು ಬಾಗಿಲಲ್ಲಿ ನಿಂತು ಫೋಟೋ ತೆಗೆಯುವಂತಾಯಿತು. ಈ ಬಗ್ಗೆ ಪ್ರಶ್ನಿಸಿದಾಗ ಮೂರು ಗಂಟೆಯ ಬಳಿನ ಸೂಚನಾ ಫಲಕದಲ್ಲಿ ಎಲ್ಲಾ ವಿವರಗಳನ್ನು ನೀಡಲಾಗುವುದು ಎಂದು ಚುನಾವಣಾಧಿಕಾರಿ ತಿಳಿಸಿದರು. ಚುನಾವಣಾಧಿಕಾರಿಗಳ ಈ ವರ್ತನೆಗೆ ಮಾಧ್ಯಮ ಪ್ರತಿನಿಧಿಗಳು ಮಾತ್ರವಲ್ಲದೆ ಇತರರೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!