ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ನಿಂತಿಲ್ಲ ಎಂಬುದನ್ನು ಒಪ್ಪಿಕೊಂಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇದನ್ನು ತಡೆಯಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ ಎಂದು ಮಂಗಳವಾರ ವಿಧಾನಪರಿಷತ್ತಿನಲ್ಲಿ ಹೇಳಿದ್ದಾರೆ.
ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಅನಿಷ್ಟ ಎಂದು ಕರೆದ ಸಚಿವರು, ಇದನ್ನು ತಡೆಗಟ್ಟಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಸರ್ಕಾರ ಎಲ್ಲ ಜಿಲ್ಲೆಗಳಲ್ಲಿ ಪ್ರತ್ಯೇಕ ನೋಡಲ್ ಅಧಿಕಾರಿಗಳನ್ನು ನೇಮಿಸುತ್ತಿದೆ. ಇಂತಹ ಚಟುವಟಿಕೆಗಳನ್ನು ನಿಯಂತ್ರಿಸಲು ಕಾನೂನು ಬಲಪಡಿಸುವಿಕೆಯನ್ನು ಸರ್ಕಾರ ಪರಿಗಣಿಸಲಿದೆ ಎಂದು ಅವರು ಭರವಸೆ ನೀಡಿದರು.
ಬಿಜೆಪಿ ಸದಸ್ಯ ಸಿ.ಟಿ. ರವಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೆಣ್ಣು ಭ್ರೂಣ ಹತ್ಯೆ ಖಂಡಿತ ನಿಂತಿಲ್ಲ. ನೀವು ಲಿಂಗ ಅನುಪಾತವನ್ನು ನೋಡಿದರೆ, ಬಹಳಷ್ಟು ವ್ಯತ್ಯಾಸವಿದೆ. ಇದು ನಡೆಯುತ್ತಿದೆ ಎಂದು ನಾನು ಒಪ್ಪಿಕೊಳ್ಳುತ್ತೇನೆ ಎಂದು ರಾವ್ ಹೇಳಿದರು.
ಭ್ರೂಣ ಹತ್ಯೆಗಳು ಒತ್ತಡದಲ್ಲಿ ನಡೆಯುತ್ತಿಲ್ಲ. ಹೆಣ್ಣು ಮಗು ಬೇಡ ಎಂಬ ಕಾರಣಕ್ಕೆ ಸ್ವಯಂಪ್ರೇರಣೆಯಿಂದ ನಡೆಯುತ್ತಿದೆ. ಕೆಲವು ಆಸ್ಪತ್ರೆಗಳಲ್ಲಿ ಲಿಂಗ ಪತ್ತೆ ಆಧಾರದ ಮೇಲೆ ಇಂತಹ ಘಟನೆಗಳು ನಡೆಯುತ್ತಿವೆ. ಇದು ಕಾನೂನುಬಾಹಿರವಾಗಿದ್ದು, ತಂತ್ರಜ್ಞಾನದ ಪ್ರಗತಿಯೊಂದಿಗೆ ಪೋರ್ಟಬಲ್ ಅಲ್ಟ್ರಾಸೌಂಡ್ ಯಂತ್ರಗಳನ್ನು ಅಭಿವೃದ್ಧಿಪಡಿಸಲಾಗಿದೆ. ಇದನ್ನು ಎಲ್ಲಿ ಬೇಕಾದರೂ ಸುಲಭವಾಗಿ ಸಾಗಿಸಬಹುದು ಪರಿಶೀಲಿಸಬಹುದು. ಇದಕ್ಕೆ ಕಡಿವಾಣ ಹಾಕಬೇಕಾದ ಅಗತ್ಯವಿದೆ. ಇದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರುತ್ತೇವೆ ಎಂದರು.

