ಹೊಸದಿಗಂತ ಡಿಜಿಟಲ್ ಡೆಸ್ಕ್:
ನಗರದಲ್ಲಿ ಬಿಜೆಪಿ ಕಾರ್ಯಕರ್ತೆಯೊಬ್ಬರನ್ನು ಅರೆನಗ್ನಗೊಳಿಸಿ ಹಲ್ಲೆ ಮಾಡಿರುವ ಪ್ರಕರಣವು ಈಗ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದೆ. ಈ ಘಟನೆಯನ್ನು ಪೊಲೀಸರು ಮತ್ತು ಸರ್ಕಾರ ನಿಭಾಯಿಸುತ್ತಿರುವ ರೀತಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಂಧಿಸಲು ಹೋದಾಗ ಬಿಜೆಪಿ ಕಾರ್ಯಕರ್ತೆಯೇ ತಾವಾಗಿ ಬಟ್ಟೆ ಬಿಚ್ಚಿಕೊಂಡಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಜೋಶಿ ಕಟುವಾಗಿ ಟೀಕಿಸಿದ್ದಾರೆ. “ಇಂತಹ ಹೇಳಿಕೆ ನೀಡಲು ನಿಮಗೆ ನಾಚಿಕೆಯಾಗುವುದಿಲ್ಲವೇ?” ಎಂದು ಪ್ರಶ್ನಿಸಿದ ಅವರು, ಘಟನೆಯ ಸಮಯದಲ್ಲಿ ಪೊಲೀಸರು ಕೇವಲ ಮೂಕಪ್ರೇಕ್ಷಕರಾಗಿ ವಿಡಿಯೋ ಚಿತ್ರೀಕರಿಸುತ್ತಿದ್ದರಾ ಎಂದು ಕಿಡಿಕಾರಿದ್ದಾರೆ.
ಪೊಲೀಸರು ಕರ್ತವ್ಯ ಲೋಪ ಎಸಗುತ್ತಿದ್ದಾರೆ ಮತ್ತು ಸರ್ಕಾರ ಆರೋಪಿಗಳನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿದ ಜೋಶಿ, “ಈ ಪ್ರಕರಣದಲ್ಲಿ ತಕ್ಷಣವೇ ನ್ಯಾಯೋಚಿತ ತನಿಖೆಯಾಗಬೇಕು. ಒಂದು ವೇಳೆ ಸರ್ಕಾರ ವಿಳಂಬ ಧೋರಣೆ ಅನುಸರಿಸಿದರೆ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

