ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಕಥುವಾ- ಬಸಂತಗಢ ಗಡಿ ಪ್ರದೇಶದಲ್ಲಿ ಭದ್ರತಾ ಪಡೆಗಳ ಗುಂಡಿಗೆ ಮೂವರು ಉಗ್ರರು ಹತ್ಯೆಯಾಗಿದ್ದಾರೆ. ಇವರನ್ನು ಪಾಕಿಸ್ತಾನಿ ಪ್ರಜೆಗಳು ಎಂದು ಗುರುತಿಸಲಾಗಿದೆ.
ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಉಗ್ರರ ಕಾರ್ಯಾಚರಣೆ ಮುಂದುವರಿದಿದೆ ಎಂದು ‘ರೈಸಿಂಗ್ ಸ್ಟಾರ್ ಕಾರ್ಪ್ಸ್’ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಹೇಳಿದೆ.
ರಕ್ಷಣಾ ಸಾರ್ವಜನಿಕ ಸಂಪರ್ಕ ಅಧಿಕಾರಿಯ ಪ್ರಕಾರ, ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ದಾಳಿ ನಡೆಸಿವೆ ಮತ್ತು ಕಥುವಾ- ಬಸಂತಗಢ ಗಡಿ ಪ್ರದೇಶದಲ್ಲಿ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆದಿದೆ. ಭದ್ರತಾ ಪಡೆಗಳ ಗುಂಡಿಗೆ ಬಲಿಯಾದ ಇಬ್ಬರು ಭಯೋತ್ಪಾದಕರನ್ನು ಪಾಕಿಸ್ತಾನಿ ಪ್ರಜೆಗಳೆಂದು ಗುರುತಿಸಲಾಗಿದ್ದು, ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಆಹಾರ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಇದೇ ತಿಂಗಳ 18ರಿಂದ ಮೂರು ಹಂತಗಳಲ್ಲಿ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದ ಭದ್ರತಾ ಪಡೆಗಳು ಕಟ್ಟೆಚ್ಚರ ವಹಿಸಿದ್ದು, ಉಗ್ರರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿವೆ.