ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಗಸ್ಟ್ 12 ರಿಂದ ಆಶಾ ಕಾರ್ಯಕರ್ತೆಯರು ಮೂರು ದಿನಗಳ ಕಾಲ ಮುಷ್ಕರಕ್ಕೆ ಮುಂದಾಗಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ ಹೊರತುಪಡಿಸಿ, ಪ್ರತಿಭಟನಾ ಅವಧಿಯಲ್ಲಿ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ರಜೆ ತೆಗೆದುಕೊಳ್ಳುವುದನ್ನು ನಿರ್ಬಂಧಿಸಿ ಕರ್ನಾಟಕ ಆರೋಗ್ಯ ಇಲಾಖೆ ಸೋಮವಾರ ಸುತ್ತೋಲೆ ಹೊರಡಿಸಿದೆ.
ಮಾನ್ಯತೆ ಪಡೆದ ಆರೋಗ್ಯ ಕಾರ್ಯಕರ್ತೆಯರು ಜನವರಿಯಲ್ಲಿ ರಾಜ್ಯ ಸರ್ಕಾರ ಭರವಸೆ ನೀಡಿದಂತೆ 10,000 ರೂ.ಗಳ ನಿಗದಿತ ಗೌರವಧನ ನೀಡಬೇಕು ಎಂದು ಆಗ್ರಹಿಸಿ ಆಗಸ್ಟ್ 12 ರಿಂದ 14 ರವರೆಗೆ ರಾಜ್ಯ ಮಟ್ಟದ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ.
ಜಿಲ್ಲಾ ಮಿತಿಯೊಳಗೆ ಕರ್ತವ್ಯಕ್ಕೆ ಗೈರುಹಾಜರಾದ ಆಶಾ ಕಾರ್ಯಕರ್ತರ ಬಗ್ಗೆ ಮಾಹಿತಿಯನ್ನು ಪ್ರತಿದಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಸಂಗ್ರಹಿಸಿ ಪ್ರತಿಭಟನೆಯ ಸಮಯದಲ್ಲಿ ಮಧ್ಯಾಹ್ನ 3 ಗಂಟೆಯೊಳಗೆ ಆಯುಕ್ತಾಲಯಕ್ಕೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.
ಸಮುದಾಯ ಆರೋಗ್ಯ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಅಧಿಕಾರಿಗಳು, ಆರೋಗ್ಯ ನಿರೀಕ್ಷಕರು ಮತ್ತು ಅಂಗನವಾಡಿ ಕಾರ್ಯಕರ್ತರು ಸಾರ್ವಜನಿಕರಿಗೆ ಆರೋಗ್ಯ ಸೇವೆಯಲ್ಲಿ ವ್ಯತ್ಯಯವಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.