ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ರಿಕೆಟ್ ಅಭಿಮಾನಿಗಳು ಬಹುನಿರೀಕ್ಷಿತ ಏಷ್ಯಾಕಪ್ ಟಿ20 ಟೂರ್ನಿಗೆ ಕಾತುರದಿಂದ ಕಾಯುತ್ತಿದ್ದಾರೆ. ಸೆಪ್ಟೆಂಬರ್ 9ರಿಂದ ಆರಂಭವಾಗಲಿರುವ ಈ ಟೂರ್ನಿಯ ಪ್ರಮುಖ ಆಕರ್ಷಣೆಯೆಂದರೆ ಭಾರತ ಮತ್ತು ಪಾಕಿಸ್ತಾನ್ ನಡುವಿನ ಪೈಪೋಟಿ. ಸಾಂಪ್ರದಾಯಿಕ ಎದುರಾಳಿಗಳಾದ ಈ ಇಬ್ಬರು ತಂಡಗಳು ದುಬೈ ಇಂಟರ್‌ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಸೆಪ್ಟೆಂಬರ್ 14ರಂದು ಮುಖಾಮುಖಿಯಾಗಲಿವೆ.
ಈ ಕಾದಾಟದ ಮುನ್ನವೇ ಪಾಕಿಸ್ತಾನದ ವೇಗಿ ಹ್ಯಾರಿಸ್ ರೌಫ್ ಮಾತಿನ ಬಾಣ ಹಾರಿಸಿದ್ದು, “ಇನ್‌ಷಾ ಅಲ್ಲಾಹ್, ಈ ಸಲ ಭಾರತ ವಿರುದ್ಧ ನಡೆಯಲಿರುವ ಎರಡೂ ಪಂದ್ಯಗಳಲ್ಲಿ ನಾವೇ ಗೆಲ್ಲುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಭ್ಯಾಸ ಸಮಯದಲ್ಲಿ ಅಭಿಮಾನಿಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರೌಫ್ ಅವರ ಈ ಹೇಳಿಕೆ ಈಗ ಕ್ರಿಕೆಟ್ ಪ್ರೇಮಿಗಳಲ್ಲಿ ಚರ್ಚೆಯಾಗುತ್ತಿದೆ.
ಭಾರತ ಮತ್ತು ಪಾಕಿಸ್ತಾನ್ ತಂಡಗಳು ಒಂದೇ ಗುಂಪಿನಲ್ಲಿ ಇರುವುದರಿಂದ ಮೊದಲ ಸುತ್ತಿನಲ್ಲಿ ಒಂದು ಬಾರಿ ಮುಖಾಮುಖಿಯಾಗುತ್ತವೆ. ಇನ್ನು ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಗಳಿಸಿದರೆ ಸೂಪರ್-4 ಹಂತದಲ್ಲಿಯೂ ಈ ತಂಡಗಳ ಪೈಪೋಟಿ ಮರುಕಳಿಸಬಹುದು. ಇದನ್ನೇ ಉಲ್ಲೇಖಿಸಿ ಹ್ಯಾರಿಸ್ ರೌಫ್ ತಮ್ಮ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಈ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಕಾದಾಟದ ದಿನಕ್ಕಾಗಿ ಇನ್ನಷ್ಟು ಕಾತುರದಿಂದ ಕಾಯುತ್ತಿದ್ದಾರೆ. ಅದೇ ವೇಳೆ ಟೂರ್ನಿಗೆ ಭಾರತ ಮತ್ತು ಪಾಕಿಸ್ತಾನ್ ತಂಡಗಳ ಘೋಷಣೆಯೂ ಹೊರಬಂದಿದೆ.
ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶುಭ್‌ಮನ್ ಗಿಲ್ (ಉಪನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.
ಪಾಕಿಸ್ತಾನ್ ತಂಡ: ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಫಹೀಮ್ ಅಶ್ರಫ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಹಸನ್ ಅಲಿ, ಹಸನ್ ನವಾಝ್, ಹುಸೇನ್ ತಲತ್, ಖುಷ್ದಿಲ್ ಶಾ, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ಸಾಹಿಬ್‌ಝಾದ್ ಫರ್ಹಾನ್, ಶಾಹೀನ್ ಅಫ್ರಿದಿ, ಸಲ್ಮಾನ್ ಮಿರ್ಝಾ, ಸೈಮ್ ಅಯ್ಯೂಬ್, ಸುಫಿಯಾನ್ ಮುಖಿಮ್.