ಹೊಸದಿಗಂತ ಡಿಜಿಟಲ್ ಡೆಸ್ಕ್:
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ನ. 10 ಕ್ಕೆ ಮುಂದೂಡಿದೆ.
ಆದಾಯ ಮೀರಿ ಆಸ್ತಿಗಳಿಗೆ (Disproportionate Assets Case) ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ ಆದೇಶ ಪ್ರಶ್ನಿಸಿ ಸಿಬಿಐ (CBI) ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ (Supreme Court) ಶುಕ್ರವಾರಕ್ಕೆ ಮುಂದೂಡಿದೆ
ವಿಚಾರಣೆಯನ್ನು ನ್ಯಾ. ಬೇಲಾ ಎಂ ತ್ರಿವೇದಿ ನೇತೃತ್ವದ ದ್ವಿಸದಸ್ಯ ಪೀಠ ನಡೆಸಿತು. ವಿಚಾರಣೆ ವೇಳೆ ಪ್ರತಿಕ್ರಿಯೆ ಸಲ್ಲಿಸಲು ಡಿ.ಕೆ ಶಿವಕುಮಾರ್ ಪರ ವಕೀಲರು ಸಮಯಾವಕಾಶ ಕೇಳಿದ ಹಿನ್ನಲೆ ವಿಚಾರಣೆ ಮುಂದೂಡಲಾಯಿತು.
ಈಗಲ್‌ಟನ್ ರೆಸಾರ್ಟ್‌ನಲ್ಲಿ ನಡೆದ ದಾಳಿಯನ್ನು ಅಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಸಿಬಿಐ ತನಿಖೆಗೆ ನೀಡಿತ್ತು. ಸರ್ಕಾರದ ನಡೆಯನ್ನು ಪ್ರಶ್ನಿಸಿ ಡಿ.ಕೆ ಕುಮಾರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು, ಅರ್ಜಿ ವಿಚಾರಣೆ ನಡೆಸಿದ್ದ ಏಕ ಸದಸ್ಯ ಪೀಠ ಅರ್ಜಿ ವಜಾ ಮಾಡಿತ್ತು. ಇದನ್ನು ಪ್ರಶ್ನೆ ಮಾಡಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ವಿಭಾಗೀಯ ಪೀಠ ತನಿಖೆಗೆ ತಡೆ ನೀಡಿತ್ತು.ವಿಭಾಗೀಯ ಪೀಠದ ಆದೇಶವನ್ನು ಪ್ರಶ್ನೆ ಮಾಡಿ ಸಿಬಿಐ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು.
ಇಂದು ವಿಚಾರಣೆ ವೇಳೆ ವಾದ ಮಂಡಿಸಿದ ಸಿಬಿಐ ಪರ ವಕೀಲರು ಸುಳ್ಳು ಆಧಾರದಲ್ಲಿ ಸಂಪೂರ್ಣ ತನಿಖೆಗೆ ತಡೆ ನೀಡಲಾಗಿದೆ ಎಂದು ಆರೋಪಿಸಿದರು. ಇದಕ್ಕೆ ಪ್ರತಿಯಾಗಿ ಡಿ.ಕೆ ಶಿವಕುಮಾರ್ ಪರ ವಾದ ಮಂಡಿಸಿದ ಮುಕುಲ್ ರೋಹಟಗಿ, ತಡೆ ರದ್ದು ಕೋರಿ ಸಿಬಿಐ ಈಗಾಗಲೇ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ಸಮಯ ಬೇಕು ಎಂದು ಮನವಿ ಮಾಡಿದರು.
ವಾದ ಪ್ರತಿವಾದವನ್ನು ಆಲಿಸಿದ ಸುಪ್ರೀಂಕೋರ್ಟ್ ಶುಕ್ರವಾರ ವಿಚಾರಣೆ ನಡೆಸುವುದಾಗಿ ಹೇಳಿತು.