July 6, 2026
Monday, July 6, 2026
spot_img

ಬಸವ ಹರಳಯ್ಯ ಸ್ವಾಮೀಜಿ ಮೇಲೆ ಹಲ್ಲೆ ಪ್ರಕರಣ: ಖರ್ಗೆ ರಾಜೀನಾಮೆಗೆ ಜೆಡಿಎಸ್ ಆಗ್ರಹ

ಹೊಸದಿಗಂತ ವರದಿ ಚಿತ್ರದುರ್ಗ:

ಶ್ರೀ ಬಸವ ಹರಳಯ್ಯ ಮಹಾಸ್ವಾಮೀಜಿಗಳ ಮೇಲೆ ಹಲ್ಲೆ ಮಾಡಿದ ಪ್ರಕರಣದಲ್ಲಿ ಪೊಲೀಸ್ ವೈಫಲ್ಯವೇ ಕಾರಣ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿರುವುದರಿಂದ ಗೃಹ ಸಚಿವ ಪ್ರಿಯಾಂಕ ಖರ್ಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಅಮಾನತುಗೊಳಿಸಬೇಕೆಂದು ಜೆಡಿಎಸ್ ಯುವ ಘಟಕ ಮತ್ತು ಕಾನೂನು ವಿಭಾಗ ಒತ್ತಾಯಿಸಿದೆ.

ಹಲ್ಲೆ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿರುವ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಪದಾಧಿಕಾರಿಗಳು, ಹಿರಿಯೂರು ತಾಲ್ಲೂಕಿನಲ್ಲಿ ಶಾಸಕರು ಇಲ್ಲದಿರುವುದರಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಶ್ರೀ ಬಸವ ಹರಳಯ್ಯ ಸ್ವಾಮಿಜಿಗಳ ಮೇಲೆ ಹಲ್ಲೆ, ಜಾತಿ ನಿಂದನೆ ಮಾಡಿದ್ದು, ಪ್ರಕರಣಗಳು ದಾಖಲಾಗಿರುತ್ತವೆ. ಶ್ರೀಗಳ ಮೇಲೆ ಹಲ್ಲೆ ಆಗಿರುವುದರಿಂದ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಪರಿಣಾಮವಾವಿ ಅವರು ಚಿತ್ರದುರ್ಗ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ:

ಸ್ವಾಮೀಜಿ ಅವರಿಗೆ ಎದೆ, ಹೊಟ್ಟೆ ಹಾಗೂ ಇತರೆ ಭಾಗಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ. ಸ್ವಾಮೀಜಿ ಅವರ ಸ್ಥಿತಿ ಕಂಡಾಗ ಪೊಲೀಸ್ ವೈಫಲ್ಯ ಮೇಲ್ನೋಟಕ್ಕೆ ಕಂಡುಬರುತ್ತದೆ. ಸ್ವಾಮೀಜಿಯವರ ಮೇಲೆ ಹಲ್ಲೆ ಮಾಡುವುದಲ್ಲದೇ ಅವರಿಗೆ ಪ್ರಾಣ ಬೆದರಿಕೆ ಹಾಕಲಾಗಿದೆ. ಈ ಕುರಿತು ಹಿರಿಯೂರು ಡಿವೈಎಸ್‌ಪಿ ಅವರಿಗೆ ಕರೆ ಮಾಡಿದಾಗ ಕರೆ ಸ್ವೀಕರಿಸಿಲ್ಲ. ಅಲ್ಲದೇ ಯಾವುದೇ ಅಧಿಕಾರಿಗಳು ಬಂದು ಸ್ವಾಮೀಜಿಯವರ ಸ್ಥಿತಿಯ ಬಗ್ಗೆ ವಿಚಾರಿಸಿಲ್ಲ. ಹಾಗಾಗಿ ಪ್ರಕರಣ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಕೂಡಲೇ ಶ್ರೀ ಬಸವ ಹರಳಯ್ಯ ಸ್ವಾಮೀಜಿಗಳ ಮೇಲೆ ಹಲ್ಲೆ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಸ್ವಾಮೀಜಿಗಳ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲಾಡಳಿತ ಸೂಕ್ತ ಚಿಕಿತ್ಸೆ ಮತ್ತು ಸೂಕ್ತ ರಕ್ಷಣೆ ಒದಗಿಸಬೇಕು. ಹೆಚ್ಚಿನ ಚಿಕಿತ್ಸೆಯ ಬಗ್ಗೆ ವೈದ್ಯರನ್ನು ಸಂಪರ್ಕ ಮಾಡಿ ಅಗತ್ಯ ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಪ್ರತಾಪ್‌ಜೋಗಿ, ವಕೀಲರಾದ ರಾಜಣ್ಣ, ಜೆಡಿಎಸ್ ಕಾನೂನು ವಿಭಾಗದ ಉಪಾಧ್ಯಕ್ಷ ಅಶೋಕ್ ಬೆಳಗಟ್ಟ, ಪ್ರಧಾನ ಕಾರ್ಯದರ್ಶಿ ರಮೇಶ್, ಜಿಲ್ಲಾ ಕಾರ್ಯದರ್ಶಿ ಗುರುಮೂರ್ತಿ, ಮಲ್ಲಿಕಾರ್ಜುನ್ ಮತ್ತಿತರರು ಹಾಜರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !