Friday, January 9, 2026

ಮಹಿಳೆ ಮೇಲಿನ ಹಲ್ಲೆ ಅಕ್ಷಮ್ಯ ಅಪರಾಧ: ಗೃಹ ಸಚಿವರ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ

ಹೊಸದಿಗಂತ ಹುಬ್ಬಳ್ಳಿ:

ನಗರದ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಮಾಯಕ ಮಹಿಳೆಯ ಮೇಲೆ ನಡೆದಿರುವ ಪೊಲೀಸ್ ಹಲ್ಲೆ ಮತ್ತು ಅನುಚಿತ ವರ್ತನೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀವ್ರವಾಗಿ ಖಂಡಿಸಿದ್ದಾರೆ. ಇದೊಂದು ಅಕ್ಷಮ್ಯ ಅಪರಾಧ ಹಾಗೂ ನಾಚಿಕೆಗೇಡಿನ ಸಂಗತಿ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ಸ್ಥಳೀಯ ಕಾಂಗ್ರೆಸ್ ಕಾರ್ಪೊರೇಟರ್ ನೀಡಿದ ದೂರಿನ ಮೇರೆಗೆ ಪೊಲೀಸರು ಬಿಜೆಪಿ ಮಹಿಳಾ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಸಚಿವರು, “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಪೊಲೀಸರು ಅಧಿಕಾರ ಪಕ್ಷದ ಕೈಗೊಂಬೆಯಂತೆ ವರ್ತಿಸುತ್ತಾ ಮಹಿಳೆಯರ ಮೇಲೆ ದರ್ಪ ತೋರುತ್ತಿರುವುದು ದುರಾಡಳಿತದ ಪರಮಾವಧಿ” ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆಯನ್ನು ಹಾಳುಮಾಡಿ ದಬ್ಬಾಳಿಕೆ ನಡೆಸುತ್ತಿದೆ. ಪ್ರಸ್ತುತ ನಡೆಯುತ್ತಿರುವುದು ತುಘಲಕ್ ದರ್ಬಾರ್ ಎಂದು ಅವರು ಟೀಕಿಸಿದರು.

ರಾಜ್ಯದಲ್ಲಿ ಇಷ್ಟೆಲ್ಲಾ ನಡೆಯುತ್ತಿದ್ದರೂ ಗೃಹ ಸಚಿವರು ಕಣ್ಣು ಮುಚ್ಚಿ ಕುಳಿತಿದ್ದಾರೆ. ಅವರ ಆಡಳಿತ ವೈಫಲ್ಯದಿಂದ ಜನ ಭಯದಲ್ಲಿದ್ದಾರೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಕೇವಲ ಕುರ್ಚಿ ಕಿತ್ತಾಟದ ನಾಟಕದಲ್ಲಿ ಮುಳುಗಿದ್ದಾರೆ. ಇದರಿಂದಾಗಿ ಸಾಮಾನ್ಯ ಜನರ ರಕ್ಷಣೆ ಮರೀಚಿಕೆಯಾಗಿದೆ ಎಂದು ಅವರು ಗುಡುಗಿದ್ದಾರೆ.

ಮಹಿಳೆಯ ಮೇಲೆ ಹಲ್ಲೆ ನಡೆಸಿ ಅಸಭ್ಯವಾಗಿ ವರ್ತಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಹಾಗೂ ಈ ಪಿತೂರಿಯ ಹಿಂದೆ ಇರುವವರ ವಿರುದ್ಧ ಸರ್ಕಾರ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರಹ್ಲಾದ್ ಜೋಶಿ ಒತ್ತಾಯಿಸಿದ್ದಾರೆ.

error: Content is protected !!