ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18ನೇ ಕಂತಿನ ಹಣ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ನವೆಂಬರ್‌ನಲ್ಲಿ ಫಲಾನುಭವಿಗಳ ಖಾತೆಗೆ 2 ಸಾವಿರ ರೂ. ಜಮೆ ಆಗಲಿದೆ.
17ನೇ ಕಂತು ಜೂನ್‌ನಲ್ಲಿ ರಿಲೀಸ್ ಆಗಿತ್ತು. 16ನೇ ಕಂತು ಫೆಬ್ರವರಿಯಲ್ಲಿ ಬಿಡುಗಡೆಯಾಗಿತ್ತು. ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು 2೦19ರಲ್ಲಿ ಜಾರಿಗೆ ತಂದಿದೆ.
ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಇ-ಕೆವೈಸಿ ಕಡ್ಡಾಯ
ಕಿಸಾನ್ ಸಮ್ಮಾನ್ ನಿಧಿಯ ಕಂತನ್ನು ಪಡೆಯಲು ಫಲಾನುಭವಿ ರೈತರು ಇ-ಕೆವೈಸಿ ಪೂರ್ಣಗೊಳಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಇ-ಕೆವೈಸಿ ಮಾಡದ ರೈತರಿಗೆ ಖಾತೆಗೆ ಹಣ ಬಿಡುಗಡೆಯಾಗುವುದಿಲ್ಲ. ಒಟಿಪಿ ಆಧಾರಿತ ಇ-ಕೆವೈಸಿಯನ್ನು ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಮಾಡಬಹುದು.