ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾನಾ ಬಳಿ ಶುಕ್ರವಾರ ಸಂಭವಿಸಿದ ಭಾರೀ ಹಿಮಪಾತದಲ್ಲಿ ಸಿಲುಕಿದ್ದ ಗಡಿ ರಸ್ತೆ ಸಂಸ್ಥೆ 55 ಕಾರ್ಮಿಕರ ಪೈಕಿ ಈವರೆಗೂ 46 ಮಂದಿಯನ್ನು ರಕ್ಷಿಸಲಾಗಿದ್ದು, ಉಳಿದವರಿಗಾಗಿ ಭಾರತೀಯ ಸೇನಾಪಡೆ ಸೇರಿದಂತೆ ರಕ್ಷಣಾ ಪಡೆಗಳು ಕಾರ್ಯಾಚರಣೆಯನ್ನು ಮುಂದುವರೆಸಿವೆ.
ರಕ್ಷಣಾ ಕಾರ್ಯಾಚರಣೆಯ ಎರಡನೇ ದಿನವಾದ ಇಂದು ರಕ್ಷಣಾ ಪಡೆಗಳು 14 ಮಂದಿ ಕಾರ್ಮಿಕರನ್ನು ರಕ್ಷಣೆ ಮಾಡಿದೆ. 14 ಮಂದಿಯ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಾರೀ ಹಿಮಪಾತದ ಕಾರಣ ಶುಕ್ರವಾರ ಸಂಜೆ ಶೋಧ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಹವಾಮಾನ ಬದಲಾದ ಬಳಿಕ ಕಾರ್ಯಾಚರಣೆಯನ್ನು ಪುನರಾರಂಭಿಸಲಾಗಿದೆ. ಚಮೋಲಿಯ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ನಂದ ಕಿಶೋರ್ ಜೋಶಿ ಅವರು ರಕ್ಷಣಾ ಕಾರ್ಯಾಚರಣೆಯನ್ನು ಪುನರಾರಂಭಿಸಿರುವ ಕುರಿತು ಮಾಹಿತಿ ನೀಡಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಪುನರಾರಂಭಿಸಲಾಗಿದ್ದು, ಇಂದು 14 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ರಕ್ಷಿಸಲ್ಪಟ್ಟ ಕಾರ್ಮಿಕರನ್ನು ವೈದ್ಯಕೀಯ ನೆರವು ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಮನ ಸೇನಾ ಶಿಬಿರಕ್ಕೆ ಕರೆದೊಯ್ಯಲಾಗಿದೆ ಎಂದು ಹೇಳಿದ್ದಾರೆ.