ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ಪಾಕ್ ಕ್ರಿಕೆಟಿಗ ಅಝರ್ ಅಲಿ ವಿದಾಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಅಝರ್ ಅಲಿ ಇಂದು ವಿದಾಯ ಘೋಷಿಸಿದ್ದಾರೆ.

ಇಂಗ್ಲೆಂಡ್ ವಿರುದ್ದ ಕರಾಚಿಯಲ್ಲಿ ನಡೆಯಲಿರುವ ಮೂರನೇ ಟೆಸ್ಟ್‌ ಪಂದ್ಯವು ಅಝರ್‌ ಅಲಿ ಪಾಲಿಗೆ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗಿದೆ.

‘ನನ್ನ ದೇಶವನ್ನು ಅತ್ಯುನ್ನತ ಮಟ್ಟದಲ್ಲಿ ಪ್ರತಿನಿಧಿಸಲು ಅವಕಾಶ ಸಿಕ್ಕಿದ್ದು ನನ್ನ ಪಾಲಿನ ಸೌಭಾಗ್ಯವೆಂದು ಭಾವಿಸುತ್ತೇನೆ. ಈ ನಿರ್ಧಾರವನ್ನು ತೆಗೆದುಕೊಳ್ಳುವುದು ಅತ್ಯಂತ ಕಠಿಣ ಕ್ಷಣ. ತುಂಬಾ ಆಲೋಚನೆ ಮಾಡಿದ ಬಳಿಕ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಘೋಷಿಸುವುದು ಸರಿಯಾದ ಕ್ಷಣವೆಂದು ಭಾವಿಸಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ’ ಎಂದು ಅಝರ್ ಅಲಿ ಹೇಳಿದ್ದಾರೆ.

ಅಝರ್ ಅಲಿ 2016ರಿಂದ 2020ರ ಅವಧಿಯಲ್ಲಿ 9 ಟೆಸ್ಟ್‌ ಪಂದ್ಯಗಳಲ್ಲಿ ನಾಯಕನಾಗಿ ಪಾಕಿಸ್ತಾನ ತಂಡವನ್ನು ಮುನ್ನಡೆಸಿದ್ದರು.
2017ರಲ್ಲಿ ನಡೆದ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಪಾಕಿಸ್ತಾನ ತಂಡವು ಚಾಂಪಿಯನ್ ಆಗುವಲ್ಲಿ ಮಹತ್ತರ ಪಾತ್ರವಹಿಸಿದ್ದ ಅಝರ್ ಅಲಿ, 2018ರಲ್ಲಿ ಏಕದಿನ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು. ಪಾಕಿಸ್ತಾನ ತಂಡದ ಪರ ಇದುವರೆಗೂ 96 ಟೆಸ್ಟ್‌ ಪಂದ್ಯಗಳನ್ನಾಡಿ 42.49ರ ಬ್ಯಾಟಿಂಗ್ ಸರಾಸರಿಯಲ್ಲಿ 7,097 ರನ್‌ ಬಾರಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಪಾಕಿಸ್ತಾನ ಪರ ಗರಿಷ್ಠ ರನ್ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ 5ನೇ ಸ್ಥಾನ ಪಡೆದಿದ್ದಾರೆ.

ಇಂಗ್ಲೆಂಡ್‌ ಎದುರು ರಾವಲ್ಪಿಂಡಿಯಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಅಝರ್ ಅಲಿ 67 ರನ್‌ ಬಾರಿಸಿದ್ದರು. ಆ ಪಂದ್ಯದಲ್ಲಿ ಪಾಕಿಸ್ತಾನವು ಸೋಲು ಅನುಭವಿಸಿತ್ತು. ಇನ್ನು ಎರಡನೇ ಟೆಸ್ಟ್‌ ಪಂದ್ಯದಿಂದ ಅಝರ್ ಅಲಿ ಅವರನ್ನು ಕೈಬಿಡಲಾಗಿತ್ತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!