ಹೊಸದಿಗಂತ ಡಿಜಿಟಲ್ ಡೆಸ್ಕ್ :
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಭ್ರಷ್ಟಾಚಾರ ಆರೋಪಗಳು ಕೇಳಿಬಂದಿದ್ದರಿಂದ ಯುವಜನ ಸೇವಾ, ಕ್ರೀಡಾ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರನ್ನು ಗುರುವಾರ ರಾತ್ರಿ ಭೇಟಿಯಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದರು.
ಮುಖ್ಯಮಂತ್ರಿಗಳ ಕಾವೇರಿ ನಿವಾಸದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಜಮೀರ್ ಅಹಮದ್ ಖಾನ್ ಉಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ನಾಗೇಂದ್ರ ರಾಜೀನಾಮೆ ಪತ್ರ ನೀಡಿದರು. ರಾಜೀನಾಮೆ ಪತ್ರದಲ್ಲಿ ಒಂದೇ ಸಾಲು ಬರೆದಿರುವುದು ಕಂಡುಬಂದಿದ್ದು, ನನ್ನ ಸ್ವ ಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ನಾಗೇಂದ್ರ ಬರೆದಿದ್ದಾರೆ.
ಇದಕ್ಕೂ ಮೊದಲು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ನಾಗೇಂದ್ರ ಅವರು, ರಾಜೀನಾಮೆ ನೀಡುವುದು ನನ್ನ ಸ್ವ ನಿರ್ಧಾರವಾಗಿದೆ. ಇದಕ್ಕಾಗಿ ಯಾರೂ ಒತ್ತಡ ಹಾಕಿಲ್ಲ. ಆತ್ಮ ಸಾಕ್ಷಿಯಾಗಿ ರಾಜೀನಾಮೆ ನೀಡುತ್ತಿದ್ದೇನೆ. ನಾನು ಯಾವ ತಪ್ಪೂ ಮಾಡಿಲ್ಲ, ನಾನು ನಿರ್ದೋಷಿ. ಪ್ರಕರಣದಲ್ಲಿ ತನಿಖೆ ನಡೆದು ಸತ್ಯಾಂಶ ಜನರಿಗೆ ತಿಳಿಯಲಿದೆ ಎಂದು ತಿಳಿಸಿದ್ದರು.