November 25, 2026
Wednesday, November 25, 2026
spot_img

ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಜೈಲು: ಎರಡು ವಾರದಲ್ಲಿ ಶರಣಾಗುವಂತೆ ಸುಪ್ರೀಂ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗಿದ್ದ ಶಾಸಕ ವಿನಯ್‌ ಕುಲಕರ್ಣಿಗೆ ಮತ್ತೆ ಜೈಲು ಸೇರುವ ಪರಿಸ್ಥಿತಿ ಎದುರಾಗಿದೆ. ಅವರಿಗೆ ಜಾಮೀನು ನೀಡಿದ್ದ ಹೈಕೋರ್ಟ್‌ ಆದೇಶವನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದ್ದು, ಎರಡು ವಾರಗಳ ಒಳಗಾಗಿ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗುವಂತೆ ಸೂಚಿಸಿದೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕವೂ ಯೋಗೇಶ್‌ ಗೌಡ ಕೊಲೆ ಪ್ರಕರಣದ ಆರೋಪಿಯಾಗಿದ್ದ ವಿನಯ್‌ ಕುಲಕರ್ಣಿ ಬಹುತೇಕ ಜೈಲಿನಲ್ಲೇ ಕಾಲ ಕಳೆದಿದ್ದರು. ಜಾಮೀನು ಹಾಗೂ ಪೆರೋಲ್‌ ಮೂಲಕ ಈ ಹಿಂದೆ ಎರಡು ಬಾರಿ ಜೈಲಿನಿಂದ ಹೊರಬಂದಿದ್ದ ಅವರು, ಇದೀಗ ಮತ್ತೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ. ನ್ಯಾ. ಪ್ರಶಾಂತ್‌ ಕುಮಾರ್‌ ನೇತೃತ್ವದ ದ್ವಿಸದಸ್ಯ ಪೀಠ ಈ ಆದೇಶ ಹೊರಡಿಸಿದೆ.

ಈ ಕೊಲೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು 2026ರ ಏಪ್ರಿಲ್‌ 15ರಂದು ವಿನಯ್‌ ಕುಲಕರ್ಣಿ ಸೇರಿದಂತೆ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿತ್ತು. ಏಪ್ರಿಲ್‌ 17ರಂದು ವಿನಯ್‌ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಮತ್ತೊಬ್ಬ ಆರೋಪಿ ಚನ್ನಕೇಶವ ಟಿಂಗರಿಕರ್‌ಗೆ ಏಳು ವರ್ಷಗಳ ಜೈಲು ಶಿಕ್ಷೆ ನೀಡಲಾಗಿತ್ತು.

ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ವಿನಯ್‌ ಕುಲಕರ್ಣಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಜುಲೈ 31ರಂದು ಹೈಕೋರ್ಟ್‌, ಮೇಲ್ಮನವಿ ಇತ್ಯರ್ಥವಾಗುವವರೆಗೆ ಅವರ ಅಪರಾಧ ನಿರ್ಣಯ ಮತ್ತು ಶಿಕ್ಷೆಗೆ ತಡೆ ನೀಡಿ ಜಾಮೀನು ಮಂಜೂರು ಮಾಡಿತ್ತು.

ಹೈಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಹಾಗೂ ಯೋಗೇಶ್‌ ಗೌಡ ಅವರ ಸಹೋದರ ಗುರುನಾಥಗೌಡ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಇದೀಗ ಸುಪ್ರೀಂ ಕೋರ್ಟ್‌ ಹೈಕೋರ್ಟ್‌ ಆದೇಶವನ್ನು ರದ್ದುಗೊಳಿಸಿ, ಎರಡು ವಾರಗಳಲ್ಲಿ ವಿಚಾರಣಾ ನ್ಯಾಯಾಲಯಕ್ಕೆ ಶರಣಾಗುವಂತೆ ವಿನಯ್‌ ಕುಲಕರ್ಣಿಗೆ ಸೂಚಿಸಿದೆ.

Must Read