ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿಕ್ಷಣ ಇಲಾಖೆಯು ಪ್ರತಿ ತಿಂಗಳ 3ನೇ ಶನಿವಾರವನ್ನು ‘ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರ’ ಕಾರ್ಯಕ್ರಮ ನಡೆಸುವಂತೆ ಸೂಚಿಸಿದೆ.
ಇತ್ತೀಚೆಗಷ್ಟೇ ಶಾಲಾ ಬ್ಯಾಗ್ ತೂಕ ಇಳಿಸಿ ಆದೇಶ ಹೊರಡಿಸಿದ್ದ ಶಿಕ್ಷಣ ಇಲಾಖೆ, ಇದೀಗ ಸಂಭ್ರಮ ಶನಿವಾರ ಆದೇಶ ಹೊರಡಿಸಿದೆ.ಮಕ್ಕಳಿಗೆ ಸಂತಸದಾಯಕ ಕಲಿಕೆಯನ್ನು ನೀಡಲು ಹಾಗೂ ಮಕ್ಕಳಿಗೆ ಪಠ್ಯವನ್ನು ಹೊರೆಯಾಗಿಸದೆ ಉಲ್ಲಾಸದಿಂದ ಕಲಿಯುವಂತೆ ಮಾಡುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ಶನಿವಾರದಂದು ಬ್ಯಾಗ್ ರಹಿತ ದಿನವೆಂದು ಆಚರಿಸುವಂತೆ ಆದೇಶಿಸಲಾಗಿದೆ.
2023-24ನೇ ಸಾಲಿನಲ್ಲಿ ಪ್ರತಿ ತಿಂಗಳು 3ನೇ ಶನಿವಾರ ಶಾಲಾ ಹಂತದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ರಾಜ್ಯ ಶಿಕ್ಷಣ ಸಂಶೋಧನಾ ಮತ್ತು ತರಬೇತಿ ಇಲಾಖೆ (ಡಿಎಸ್ಇಆರ್ಟಿ) ಸೂಚನೆ ನೀಡಿದೆ.
.ಈ ಕುರಿತು ಜಿಲ್ಲಾ, ತಾಲ್ಲೂಕು ಹಾಗೂ ಕ್ಲಸ್ಟರ್ ಮಟ್ಟದಲ್ಲಿ ನಡೆಸಲಾಗುವ ಮುಖ್ಯ ಶಿಕ್ಷಕರು ಶಿಕ್ಷಕರ ಸಭೆಗಳಲ್ಲಿ ಅಗತ್ಯ ಮಾರ್ಗದರ್ಶನ ನೀಡುವಂತೆ ತಿಳಿಸಲಾಗಿದೆ.
ಸಂಭ್ರಮ ಶನಿವಾರ ದಂದು ಜಿಲ್ಲಾ ಹಂತ, ಬ್ಲಾಕ್ ಹಂತದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಶಾಲೆಗಳಿಗೆ ಭೇಟಿ ನೀಡಿ ಅಗತ್ಯ ಮಾರ್ಗದರ್ಶನ ನೀಡುವಂತೆ ತಿಳಿಸಲಾಗಿದೆ. 2023-24ನೇ ಶೈಕ್ಷಣಿಕ ಸಾಲಿನ ‘ಸಂಭ್ರಮ ಶನಿವಾರ’ ಆಚರಣೆಗೆ ಸಂಬಂಧಿಸಿದ ಜಿಲ್ಲಾ ಹಂತದ ಕ್ರೋಡೀಕೃತ ವರದಿಯನ್ನು ಪ್ರತಿ ತಿಂಗಳು ಸಿದ್ಧಪಡಿಸಿ ಕಚೇರಿಗೆ ಕಳುಹಿಸಿಕೊಡುವಂತೆ ಡಿಎಸ್ಇಆರ್ಟಿ ನಿರ್ದೇಶಕಿ ವಿ. ಸುಮಂಗಲಾ ತಿಳಿಸಿದ್ದಾರೆ. ವಿದ್ಯಾರ್ಥಿ ಚಟುವಟಿಕೆ ಪುಸ್ತಕ ಹಾಗೂ ಶಿಕ್ಷಕರ ಕೈಪಿಡಿಯನ್ನು ಡಿಎಸ್ಇಆರ್ಟಿ ವೆಬ್ಸೈಟ್ https://dsert.karnataka.gov.in/ನಲ್ಲಿ ಅಪ್ಲೋಡ್ ಮಾಡಲಾಗಿದೆ.