ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಪ್ರಾಪ್ತ ಮಕ್ಕಳ ಸೋಶಿಯಲ್ ಮೀಡಿಯಾ ಬಳಕೆಯಿಂದ ಉಂಟಾಗುವ ಅಪಾಯಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮದ್ರಾಸ್ ಹೈಕೋರ್ಟ್, ಆಸ್ಟ್ರೇಲಿಯಾದಲ್ಲಿ ಜಾರಿಯಲ್ಲಿರುವ ಮಾದರಿಯಂತೆ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿರ್ಬಂಧ ಹೇರುವ ಕಾನೂನನ್ನು ಭಾರತದಲ್ಲೂ ಜಾರಿಗೆ ತರಬಹುದೇ ಎಂಬುದನ್ನು ಪರಿಶೀಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.
ಸೋಷಿಯಲ್ ಮೀಡಿಯಾದ ಮೂಲಕ ಮಕ್ಕಳು ಸುಲಭವಾಗಿ ಅಶ್ಲೀಲ ಹಾಗೂ ಹಾನಿಕಾರಕ ವಿಷಯಗಳಿಗೆ ಒಡ್ಡಿಕೊಳ್ಳುತ್ತಿರುವುದನ್ನು ತಡೆಯಲು ಪರಿಣಾಮಕಾರಿ ಕಾನೂನು ಅಗತ್ಯವಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಇದನ್ನೂ ಓದಿ:
ನ್ಯಾಯಮೂರ್ತಿಗಳಾದ ಜಿ. ಜಯಚಂದ್ರನ್ ಮತ್ತು ಕೆ.ಕೆ. ರಾಮಕೃಷ್ಣನ್ ಅವರಿದ್ದ ವಿಭಾಗೀಯ ಪೀಠವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಈ ವಿಷಯವನ್ನು ಪ್ರಸ್ತಾಪಿಸಿದೆ. ಅರ್ಜಿಯಲ್ಲಿ, ಇಂಟರ್ನೆಟ್ ಸೇವೆ ಒದಗಿಸುವ ಸಂಸ್ಥೆಗಳು ಪೋಷಕರ ನಿಯಂತ್ರಣ ವ್ಯವಸ್ಥೆಯನ್ನು ಕಡ್ಡಾಯಗೊಳಿಸಬೇಕು ಎಂಬ ಬೇಡಿಕೆ ಇತ್ತು. ಇದಕ್ಕೆ ಸ್ಪಂದಿಸಿದ ನ್ಯಾಯಾಲಯ, ಮಕ್ಕಳ ಇಂಟರ್ನೆಟ್ ಬಳಕೆಯ ಅಪಾಯಗಳನ್ನು ಒಪ್ಪಿಕೊಂಡಿದ್ದು, ಜೊತೆಗೆ ಪೋಷಕರ ಹೊಣೆಗಾರಿಕೆಯೂ ಅತ್ಯಂತ ಮಹತ್ವದ್ದೆಂದು ತಿಳಿಸಿದೆ.
ಗಮನಾರ್ಹವಾಗಿ, ಆಸ್ಟ್ರೇಲಿಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆಗೆ ನಿರ್ಬಂಧ ವಿಧಿಸುವ ಕಾನೂನು ಡಿಸೆಂಬರ್ 10ರಿಂದಲೇ ಜಾರಿಯಲ್ಲಿದೆ. ಇದೇ ರೀತಿಯ ಕ್ರಮ ಭಾರತದಲ್ಲಿ ಜಾರಿಯಾಗುತ್ತದೆಯೇ ಎಂಬುದನ್ನು ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ ತೀರ್ಮಾನಿಸಬೇಕಿದೆ.

