ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮದ ವೇಳೆ ಉಂಟಾದ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿ, 75ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ರಾಜ್ಯದಾದ್ಯಂತ ಆಘಾತ ಉಂಟುಮಾಡಿದೆ. ಈ ಹಿನ್ನಲೆಯಲ್ಲಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಮೂರು ದಿನಗಳ ತುರ್ತು ವಿಧಾನಮಂಡಲ ಅಧಿವೇಶನ ಕರೆಯುವಂತೆ ಆಗ್ರಹಿಸಿದ್ದಾರೆ.
ಅವರು ಪತ್ರದಲ್ಲಿ ಈ ಘಟನೆ ಸಾರ್ವಜನಿಕ ಸುರಕ್ಷತೆ, ಗುಂಪು ನಿಯಂತ್ರಣ ಮತ್ತು ಕಾರ್ಯಕ್ರಮಗಳ ಸಂಘಟನೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ ಎಂದು ತಿಳಿಸಿದ್ದಾರೆ. ಘಟನೆಯ ನಂತರ ಸರಕಾರದ ಕ್ರಮಗಳು ಜನರಲ್ಲಿ ಅನೇಕ ಸಂಶಯಗಳಿಗೆ ಕಾರಣವಾಗಿವೆ. ತಪ್ಪಿತಸ್ಥರನ್ನು ಕಾನೂನಿನ ಮುಂದೆ ತರದೆ, ನಿರಪರಾಧ ಅಧಿಕಾರಿಗಳನ್ನು ಬಲಿಪಶು ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.
ಈ ಹಿನ್ನೆಲೆಯಲ್ಲಿ, ತುರ್ತು ಅಧಿವೇಶನದಲ್ಲಿ ಕಾಲ್ತುಳಿತಕ್ಕೆ ಕಾರಣವಾದ ಲೋಪಗಳ ಕುರಿತು ಸಮಗ್ರ ಚರ್ಚೆ ನಡೆಯಬೇಕೆಂದು ಅವರು ಹೇಳಿದ್ದಾರೆ. ಜೊತೆಗೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ, ಸಂತ್ರಸ್ತ ಕುಟುಂಬಗಳಿಗೆ ಪರಿಹಾರ, ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟುವ ಮುನ್ನೆಚ್ಚರಿಕಾ ಕ್ರಮಗಳು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ಅಗತ್ಯವೆಂದು ಅವರು ಒತ್ತಾಯಿಸಿದ್ದಾರೆ.
ಈ ಅಧಿವೇಶನವು ಜನತೆಗೆ ಸರಕಾರದ ಬದ್ಧತೆಯನ್ನೂ, ಜವಾಬ್ದಾರಿಯನ್ನೂ ತೋರಿಸಬೇಕಿದೆ ಎಂದು ಆರ್. ಅಶೋಕ್ ತಮ್ಮ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.