ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದು, ಟ್ಯಾಂಕರ್ ಮಾಫಿಯಾ ಜನರಿಂದ ಸುಲಿಗೆ ಮಾಡುತ್ತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕಳವಳ ವ್ಯಕ್ತಪಡಿಸಿದರು.
ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ದೇಶದ ಅತಿದೊಡ್ಡ ನಗರಗಳಲ್ಲಿ ಒಂದಾದ ಮತ್ತು ಭಾರತದ ಮಾಹಿತಿ ತಂತ್ರಜ್ಞಾನದ ರಾಜಧಾನಿಯಾಗಿರುವ ಬೆಂಗಳೂರು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆದರು. ಬೆಂಗಳೂರಿನ ನೀರಿನ ಸಮಸ್ಯೆ ನೀಗಿಸಲು ಮೇಕೆದಾಟು ಯೋಜನೆಗೆ ಅನುಮೋದನೆ ನೀಡಬೇಕು. ಎಲ್ಲ ರಾಜಕೀಯ ಬಿಟ್ಟು ಈ ಯೋಜನೆಗೆ ಬೆಂಬಲ ನೀಡಬೇಕು ಎಂದು ಕರೆ ನೀಡಿದರು.
ರಾಜ್ಯವನ್ನು ಆಳಿದ ಎಲ್ಲಾ ಸರ್ಕಾರಗಳು ಮೇಕೆದಾಟು ಕಾರ್ಯಕ್ರಮದ ಅಡಿಯಲ್ಲಿ ಕಾರ್ಯನಿರ್ವಹಿಸಿದವು. ಆದರೆ ಇದುವರೆಗೂ ಯಶಸ್ಸು ಕಂಡಿಲ್ಲ. ಕರ್ನಾಟಕ ಸರ್ಕಾರವು ಯೋಜನೆಯ ಅನುಮೋದನೆಗಾಗಿ ಕೇಂದ್ರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಕೇಂದ್ರ ಸರಕಾರ ಆದಷ್ಟು ಬೇಗ ಅನುಮೋದನೆ ನೀಡಬೇಕು ಎಂದು ಆಗ್ರಹಿಸಿದರು.