ಹೊಸದಿಗಂತ ಡಿಜಿಟಲ್ ಡೆಸ್ಕ್:
ಅರಬ್ಬಿ ಸಮುದ್ರದ ಲಕ್ಷದ್ವೀಪದ ಪ್ರದೇಶದಲ್ಲಿ ವಾಯುಭಾರ ಕುಸಿತ ಪರಿಣಾಮ ಕರಾವಳಿ ಕರ್ನಾಟಕ (Coastal Karnataka) ಸೇರಿದಂತೆ ರಾಜ್ಯದಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮಂಗಳವಾರ ತಿಳಿಸಿದೆ.
ಕರಾವಳಿ ಪ್ರದೇಶದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ.
ಅಕ್ಟೋಬರ್ 16 ರಂದು ಸೋಮವಾರ ಸಂಜೆ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ಮತ್ತು ಮಂಗಳೂರಿನಲ್ಲಿ ಭಾರೀ ಮಳೆ ಸುರಿದಿತ್ತು.
ಚಂಡಮಾರುತ ಸಾಧ್ಯತೆ ಹಿನ್ನೆಲೆಯಲ್ಲಿ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ನವ ಮಂಗಳೂರು ಬಂದರು ಪ್ರಾಧಿಕಾರ (ಎನ್‌ಎಂಪಿಎ) ಹಡಗುಗಳು, ಬಂದರು ಬಳಕೆದಾರರಿಗೆ ಸೂಚನೆ ನೀಡಲಾಗಿದೆ. ಪರಿಣಾಮವಾಗಿ ಎನ್‌ಎಂಪಿಎನಲ್ಲಿ ಎಲ್ಲಾ ಕಾರ್ಯಾಚರಣೆಗಳು ಸ್ಥಗಿತಗೊಳ್ಳಲಿವೆ.