November 20, 2026
Friday, November 20, 2026
spot_img

ಬಸವ ಮಂಟಪ ಕೃತಿ ವಿವಾದ : ರಾಜ್ಯಕ್ಕೆ ದೊಡ್ಡ ಅಗೌರವ ಎಂದ ಸಿಎಂ ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

‘ಬಸವ ಮಂಟಪ’ ಕೃತಿ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಈ ಪ್ರಕರಣ ಕರ್ನಾಟಕಕ್ಕೆ ದೊಡ್ಡ ಅಗೌರವ ಉಂಟುಮಾಡಿದೆ ಎಂದು ಹೇಳಿದ್ದಾರೆ. 

ಕರ್ನಾಟಕದ ಸಾಂಸ್ಕೃತಿಕ ಅಸ್ಮಿತೆಯ ಪ್ರತೀಕ ಹಾಗೂ 12ನೇ ಶತಮಾನದ ಮಹಾನ್ ಸಮಾಜ ಸುಧಾರಕ ಬಸವಣ್ಣನವರ ಕುರಿತು ಅವಹೇಳನಕಾರಿ ಅಂಶಗಳಿವೆ ಎಂಬ ಆರೋಪಕ್ಕೆ ಗುರಿಯಾಗಿರುವ ‘ಬಸವ ಮಂಟಪ’ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅಲ್ಲದೆ, ಪುಸ್ತಕದ ಲೇಖಕ ಹಾಗೂ ಪ್ರಕಟಣೆಗೆ ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ.

ಈ ಕುರಿತು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗಿದೆ. ಬಸವ ಸಮಿತಿಯ ಸದಸ್ಯರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿ, ಪುಸ್ತಕದಲ್ಲಿನ ಆಕ್ಷೇಪಾರ್ಹ ಬರಹಗಳ ಕುರಿತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ಲೇಖಕ ರವಿ ಹಂಜ್ ಹಾಗೂ ಪುಸ್ತಕದ ಪ್ರಕಟಣೆಗೆ ಸಂಬಂಧಿಸಿದ ವಿಶ್ವೇಶ್ವರ ಭಟ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳುವ ಬಗ್ಗೆಯೂ ಸಂಪುಟ ಒಪ್ಪಿಗೆ ನೀಡಿದೆ. ಆದರೆ, ಇದು ತಕ್ಷಣದ ನಿಷೇಧದ ನಿರ್ಧಾರವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು, ಪುಸ್ತಕದಲ್ಲಿನ ಬರಹಗಳು ಬಸವಣ್ಣನವರ ಘನತೆಗೆ ಧಕ್ಕೆ ತರುವಂತಿವೆ ಎಂಬುದು ಬಸವ ಸಮಿತಿಯ ಪ್ರಮುಖ ಆರೋಪವಾಗಿದೆ. ಬಸವಣ್ಣನವರನ್ನು ಕೊಲೆಗಾರ, ಕಳ್ಳ ಸೇರಿದಂತೆ ಅವಹೇಳನಕಾರಿ ಪದಗಳಿಂದ ಬಿಂಬಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಅವರು ದೂರು ದಾಖಲಿಸಿದ್ದು, ಲೇಖಕ ರವಿ ಹಂಜ್ ಮತ್ತು ವಿಶ್ವೇಶ್ವರ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಬಸವಣ್ಣನವರು ಜಾತಿ, ವರ್ಗ ಹಾಗೂ ಲಿಂಗ ತಾರತಮ್ಯವಿಲ್ಲದ ಸಮಸಮಾಜದ ನಿರ್ಮಾಣಕ್ಕೆ ಶ್ರಮಿಸಿದ ಮಹಾನ್ ಚಿಂತಕರಾಗಿದ್ದು, ಅವರ ತತ್ವಾದರ್ಶಗಳನ್ನು ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂಬ ಅಭಿಪ್ರಾಯವನ್ನು ಹಲವು ನಾಯಕರು ವ್ಯಕ್ತಪಡಿಸಿದ್ದಾರೆ. ಪುಸ್ತಕದ ವಿಚಾರವಾಗಿ ರಾಜ್ಯಾದ್ಯಂತ ಆಕ್ಷೇಪಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.

Must Read