ಹೊಸದಿಗಂತ ವರದಿ ಕಲಬುರಗಿ:
ಜಗಜ್ಯೋತಿ ಬಸವೇಶ್ವರರು ಹಾಗೂ ವೀರಶೈವ ಲಿಂಗಾಯತ ಸಮುದಾಯದ ಕುರಿತು ಲೇಖಕ ರವಿ ಹಂಜಿ ರಚಿಸಿರುವ ಬಸವ ಮಂಟಪ ಪುಸ್ತಕದಲ್ಲಿನ ವಿವಾದಾತ್ಮಕ ಅಂಶಗಳನ್ನು ಖಂಡಿಸಿ ಶನಿವಾರ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಜಾಗತಿಕ ಲಿಂಗಾಯತ ಮಹಾಸಭಾ ಸೇರಿದಂತೆ ಸಮುದಾಯದ ವಿವಿಧ ಮುಖಂಡರು ಲೇಖಕ ರವಿ ಹಂಜ್ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ, ದಿಕ್ಕಾರದ ಘೋಷಣೆಗಳನ್ನು ಕೂಗಿದರು.

ಬಸವಣ್ಣನವರು ಕರ್ನಾಟಕದ ಸಾಂಸ್ಕೃತಿಕ ನಾಯಕರು ಮಾತ್ರವಲ್ಲದೆ, ಸಮಾನತೆ, ಕಾಯಕ ಮತ್ತು ದಾಸೋಹ ತತ್ವಗಳ ಮೂಲಕ ಸಮಾಜಕ್ಕೆ ಹೊಸ ದಿಕ್ಕು ತೋರಿದ ಮಹಾನ್ ಶರಣರಾಗಿದ್ದಾರೆ. ಇಂತಹ ಮಹಾನ್ ವ್ಯಕ್ತಿತ್ವದ ಕುರಿತು ಅವಹೇಳನಕಾರಿ ಹಾಗೂ ಆಕ್ಷೇಪಾರ್ಹ ವಿಚಾರಗಳನ್ನು ಪುಸ್ತಕದಲ್ಲಿ ದಾಖಲಿಸಿರುವುದು ಬಸವಭಕ್ತರು ಮತ್ತು ವೀರಶೈವ ಲಿಂಗಾಯತ ಸಮುದಾಯದವರ ಭಾವನೆಗಳಿಗೆ ಧಕ್ಕೆ ಉಂಟುಮಾಡಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಇದನ್ನೂ ಓದಿ:
ಬಸವಣ್ಣನವರ ಚಿಂತನೆಗಳು ಜಾತಿ, ವರ್ಗ ಮತ್ತು ಲಿಂಗಭೇದಗಳನ್ನು ಮೀರಿ ಸಮಾನತೆಯ ಸಮಾಜ ನಿರ್ಮಾಣಕ್ಕೆ ಪ್ರೇರಣೆ ನೀಡಿವೆ. ಇಂತಹ ಐತಿಹಾಸಿಕ ವ್ಯಕ್ತಿತ್ವದ ಕುರಿತು ಆಧಾರರಹಿತ ಅಥವಾ ವಿವಾದಾತ್ಮಕ ಹೇಳಿಕೆಗಳನ್ನು ಪ್ರಕಟಿಸುವುದು ಸಮಾಜದಲ್ಲಿ ಅನಗತ್ಯ ಸಂಘರ್ಷಕ್ಕೆ ಕಾರಣವಾಗಬಹುದು.ಬಸವ ಮಂಟಪ ಪುಸ್ತಕದ ವಿವಾದಾತ್ಮಕ ಅಂಶಗಳನ್ನು ಪರಿಶೀಲಿಸಿ, ಲೇಖಕ ರವಿ ಹಂಜಿ ಹಾಗೂ ಪುಸ್ತಕದ ಪ್ರಕಾಶಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಪುಸ್ತಕದಲ್ಲಿರುವ ಆಕ್ಷೇಪಾರ್ಹ ವಿಚಾರಗಳ ಕುರಿತು ಸಂಬಂಧಪಟ್ಟವರು ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.
ಬಸವಣ್ಣನವರ ಗೌರವ ಮತ್ತು ಬಸವ ತತ್ವಗಳ ಘನತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಬಸವಭಕ್ತರ ಭಾವನೆಗಳಿಗೆ ನೋವುಂಟುಮಾಡುವ ಕೃತ್ಯಗಳನ್ನು ಸಹಿಸುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.



