ಹೊಸದಿಗಂತ ಡಿಜಿಟಲ್ ಡೆಸ್ಕ್:
ಚುನಾವಣಾ ಆಯೋಗದ ವಿರುದ್ಧ ಇಂಡಿಯಾ ಒಕ್ಕೂಟದ ಸಂಸದರು ನಡೆಸುತ್ತಿರುವ ಪ್ರತಿಭಟನೆ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನೆಯ ವೇಳೆ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ಕನಿಷ್ಠ ಮೂರು ಎಫ್‌ಐಆರ್‌ಗಳು ದಾಖಲಾಗಿವೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳ ಸಂಸದರು ಪ್ರತಿಭಟನೆ ನಡೆಸಿದ್ದರು. ಬುಧವಾರ ಮಧ್ಯಾಹ್ನ ಕನ್ನಾಟ್ ಪ್ಲೇಸ್‌ನ ಸಾಗರ್ ರತ್ನ ರೆಸ್ಟೋರೆಂಟ್‌ನಲ್ಲಿ ಊಟ ಮುಗಿಸಿದ ಬಳಿಕ ಸಂಸದರು ಬಸ್‌ಗಳಲ್ಲಿ ಚುನಾವಣಾ ಆಯೋಗದ ಕಚೇರಿ ಕಡೆಗೆ ತೆರಳಲು ಮುಂದಾಗಿದ್ದರು. ಆದರೆ ಭದ್ರತಾ ಸಿಬ್ಬಂದಿ ಅವರ ಸಂಚಾರವನ್ನು ತಡೆದ ಹಿನ್ನೆಲೆಯಲ್ಲಿ ಪರಿಸ್ಥಿತಿ ಬಿಗಡಾಯಿಸಿತು.
ಬಸ್ ನಿಂದ ಕೆಳಗಿಳಿದು ಸ್ಥಳದಲ್ಲೇ ಪ್ರತಿಭಟನೆ
ಬಳಿಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಹಲವು ಸಂಸದರು ಬಸ್‌ಗಳಿಂದ ಕೆಳಗಿಳಿದು ಸ್ಥಳದಲ್ಲೇ ಪ್ರತಿಭಟನೆ ಆರಂಭಿಸಿದರು. ಈ ವೇಳೆ ಪ್ರಿಯಾಂಕಾ ಗಾಂಧಿ ಸಂವಿಧಾನದ ಪ್ರತಿಯನ್ನು ಕೈಯಲ್ಲಿ ಹಿಡಿದು ರಸ್ತೆಯ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು. ಅವರನ್ನು ಸುತ್ತುವರಿದಿದ್ದ ಪಕ್ಷದ ಕಾರ್ಯಕರ್ತರು ಹಾಗೂ ಸಂಸದರು ಪೊಲೀಸರೊಂದಿಗೆ ವಾಗ್ವಾದ ನಡೆಸಿದರು. ರಾಹುಲ್ ಗಾಂಧಿ ಕೂಡ ಪೊಲೀಸರ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.
ಇದನ್ನೂ ಓದಿ:
ಪ್ರಿಯಾಂಕಾ ಗಾಂಧಿ ಅನುಚಿತವಾಗಿ ವರ್ತಿಸಿದ್ದಾರೆ?
ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಉಂಟಾದ ತಳ್ಳಾಟದಲ್ಲಿ ಕೆಲವರಿಗೆ ಗಾಯಗಳಾಗಿವೆ. ಮಹಿಳಾ ಪೊಲೀಸ್ ಸಿಬ್ಬಂದಿಯೊಂದಿಗೆ ಪ್ರಿಯಾಂಕಾ ಗಾಂಧಿ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದ್ದು, ಈ ಕುರಿತು ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ನಡೆದ ಗಲಾಟೆಯಲ್ಲಿ ಪೊಲೀಸ್ ಪೇದೆ ಅಂಕಿತ್ ಕಸಾನಾ ಅವರಿಗೂ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಂತಿಮವಾಗಿ ರಾಹುಲ್, ಪ್ರಿಯಾಂಕಾ ಸೇರಿದಂತೆ ಹಲವು ವಿರೋಧ ಪಕ್ಷಗಳ ನಾಯಕರನ್ನು ಪೊಲೀಸ್ ವಾಹನಗಳಲ್ಲಿ ಕರೆದೊಯ್ಯಲಾಯಿತು. ಇದೇ ವೇಳೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರಿಗೂ ಪ್ರತಿಭಟನೆಯ ಸಂದರ್ಭದಲ್ಲಿ ಗಾಯಗಳಾಗಿವೆ ಎಂದು ವರದಿಯಾಗಿದೆ.


