ಹೊಸದಿಗಂತ ವರದಿ ಬೆಳಗಾವಿ:
ಈ ಬಾರಿ ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಹಾಗೂ ಮಾದರಿಯಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯೋತ್ಸವದ ಅಂಗವಾಗಿ ಬೆಳಗಾವಿ ನಗರವನ್ನು ವಿದ್ಯುತ್ ದೀಪಾಲಂಕಾರದಿಂದ ಸಿಂಗರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರಾಜ್ಯೋತ್ಸವದಂದು ನಗರದಲ್ಲಿ ಲಕ್ಷಾಂತರ ಜನರು ಸೇರುವ ನಿರೀಕ್ಷೆಯಿದ್ದು, ಸಾರ್ವಜನಿಕರಿಗೆ ಕುಡಿಯುವ ನೀರು, ಸಂಚಾರಿ ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ಕನ್ನಡ ನಾಡು-ನುಡಿಗಾಗಿ ಶ್ರಮಿಸಿದ ಕನ್ನಡಪರ ಹೋರಾಟಗಾರರು ಹಾಗೂ ಸಾಧಕರನ್ನು ಸನ್ಮಾನಿಸಲು ಪ್ರತ್ಯೇಕ ಸಮಿತಿಗಳನ್ನು ರಚಿಸಲಾಗುವುದು ಎಂದು ತಿಳಿಸಿದರು.
ಬೆಳಗಾವಿ ಮಹಾನಗರ ಪಾಲಿಕೆಯಿಂದ ‘ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ’ ಎಂದು ಠರಾವು ಅಂಗೀಕರಿಸಿರುವುದು ಐತಿಹಾಸಿಕ ಹೆಜ್ಜೆಯಾಗಿದೆ. ಈ ಕಾರ್ಯಕ್ಕಾಗಿ ಹೋರಾಡಿದ ಕನ್ನಡಪರ ಸಂಘಟನೆಗಳನ್ನು ಅಭಿನಂದಿಸಿದ ಜಿಲ್ಲಾಧಿಕಾರಿಗಳು, ಸಂಪೂರ್ಣ ಮಹಾಜನ ವರದಿಯನ್ನು ಆಧರಿಸಿ ಅಂಗೀಕರಿಸಿರುವ ಠರಾವು ಮುಂದಿನ ಕಾನೂನು ಹೋರಾಟಕ್ಕೆ ಸಹಕಾರಿಯಾಗಲಿದೆ ಎಂದರು.
ಪ್ರತಿ ವರ್ಷ ರಾಜ್ಯೋತ್ಸವ ಮೆರವಣಿಗೆಗೆ ಆಗಮಿಸುವ ಜನರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಸುಲಭವಾಗಿ ಕುಳಿತು ಮೆರವಣಿಗೆಯನ್ನು ವೀಕ್ಷಿಸಲು ಅನುಕೂಲವಾಗುವಂತೆ ಮಾರ್ಗ ಬದಲಾವಣೆಯ ಕುರಿತು ಕನ್ನಡಪರ ಸಂಘಟನೆಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಮೆರವಣಿಗೆ ಮಾರ್ಗದುದ್ದಕ್ಕೂ ಕನ್ನಡ ನಾಡಿನ ಮಹನೀಯರ ಭಾವಚಿತ್ರಗಳನ್ನು ಅಳವಡಿಸುವುದರ ಜೊತೆಗೆ ಅತ್ಯುತ್ತಮ ರೂಪಕಗಳಿಗೆ ಪ್ರಶಸ್ತಿ ನೀಡಲಾಗುವುದು ಎಂದು ಹೇಳಿದರು.

ಗಡಿ ಭಾಗದ ಕನ್ನಡ ಶಾಲೆಗಳಲ್ಲಿ ಕಡ್ಡಾಯವಾಗಿ ರಾಜ್ಯೋತ್ಸವ ಆಚರಿಸಿ, ಜಿಪಿಎಸ್ ಆಧಾರಿತ ಛಾಯಾಚಿತ್ರಗಳೊಂದಿಗೆ ವರದಿ ಸಲ್ಲಿಸುವಂತೆ ಸೂಚಿಸಿದ ಅವರು, ಸದಲಗಾದ ಕುವೆಂಪು ಮಾದರಿ ಶಾಲೆಯ ಸ್ಥಿತಿಗತಿಯ ವರದಿಯನ್ನೂ ಕೇಳಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲು ಹೆಚ್ಚಿನ ಸ್ಥಳಾವಕಾಶ ಕಲ್ಪಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಸುವರ್ಣ ಸೌಧದ ಎದುರು 108 ಅಡಿ ಎತ್ತರದ ಭುವನೇಶ್ವರಿ ದೇವಿಯ ಪ್ರತಿಮೆ ನಿರ್ಮಿಸುವ ಪ್ರಸ್ತಾವನೆಯನ್ನು ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಕರಾಳ ದಿನಾಚರಣೆಗೆ ಅವಕಾಶವಿಲ್ಲ:
ಕನ್ನಡಪರ ಸಂಘಟನೆಗಳ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ಈ ಬಾರಿ ಯಾವುದೇ ಕಾರಣಕ್ಕೂ ಕರಾಳ ದಿನಾಚರಣೆಗೆ ಅನುಮತಿ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ವೇಳೆ ನಗರ ಪೊಲೀಸ್ ಆಯುಕ್ತ ಪ್ರಕಾಶ ನಿಕಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಇತರರು ಇದ್ದರು.



