November 3, 2026
Tuesday, November 3, 2026
spot_img

ಕಬ್ಬಿನ ದರದ ಕಿಚ್ಚಿಗೆ ಬೆಳಗಾವಿ ರಸ್ತೆ ಬಂದ್: ಗೌಪ್ಯ ಸಭೆ ಆರೋಪಕ್ಕೆ ರೈತರ ಆಕ್ರೋಶ

ಹೊಸದಿಗಂತ ವರದಿ ಬೆಳಗಾವಿ:

ಕಬ್ಬಿಗೆ ಸೂಕ್ತ ದರ ನಿಗದಿಪಡಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಮಂಗಳವಾರ ಮತ್ತಷ್ಟು ತೀವ್ರಗೊಂಡಿತು. ಜಿಲ್ಲಾಡಳಿತ ರೈತ ಮುಖಂಡರೊಂದಿಗೆ ಗೌಪ್ಯ ಸ್ಥಳದಲ್ಲಿ ಸಭೆ ನಡೆಸುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಎದುರು ರಸ್ತೆ ತಡೆ ನಡೆಸಿದರು. ದಿಢೀರ್ ಪ್ರತಿಭಟನೆಯಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡು ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು.

ಸಭೆಗಾಗಿ ಕಾಯುತ್ತಿದ್ದ ರೈತರ ಆಕ್ರೋಶ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಯಲಿದೆ ಎಂಬ ನಿರೀಕ್ಷೆಯಲ್ಲಿ ರೈತರು ಮಧ್ಯಾಹ್ನದಿಂದಲೇ ಕಾಯುತ್ತಿದ್ದರು. ಆದರೆ ಸಭೆ ಆರಂಭದ ಕುರಿತು ಅಧಿಕಾರಿಗಳಿಂದ ಸ್ಪಷ್ಟ ಮಾಹಿತಿ ದೊರೆಯದಿರುವುದು ಅಸಮಾಧಾನಕ್ಕೆ ಕಾರಣವಾಯಿತು. ಇದೇ ವೇಳೆ ಆಯ್ದ ಕೆಲ ರೈತ ಮುಖಂಡರನ್ನು ಒಳಗೊಂಡು ಗೌಪ್ಯ ಸ್ಥಳದಲ್ಲಿ ಸಭೆ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರ ಆಕ್ರೋಶ ಹೆಚ್ಚಾಯಿತು.

ಬಸ್ ಸಂಚಾರಕ್ಕೂ ಅಡ್ಡಿ

ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ರಸ್ತೆಯಲ್ಲಿ ಧರಣಿ ನಡೆಸಿದ ರೈತರು ವಾಹನ ಸಂಚಾರ ತಡೆದು ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿದರು. ಚನ್ನಮ್ಮ ವೃತ್ತಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಲ್ಲಿ ಬಸ್‌ಗಳನ್ನು ತಡೆಹಿಡಿದ ಪರಿಣಾಮ ಪ್ರಯಾಣಿಕರು ತೊಂದರೆ ಅನುಭವಿಸಿದರು. ರಸ್ತೆ ತಡೆಯಿಂದ ವಾಹನಗಳ ಸಾಲು ಉದ್ದಗೊಂಡಿದ್ದು, ಸಂಚಾರ ವ್ಯವಸ್ಥೆ ಕೆಲಕಾಲ ಅಸ್ತವ್ಯಸ್ತವಾಯಿತು.

ಇದನ್ನೂ ಓದಿ:

ಗಂಟೆಗಟ್ಟಲೆ ಕಾಯುತ್ತಿದ್ದರೂ ತಮ್ಮ ಸಮಸ್ಯೆಗಳಿಗೆ ಸ್ಪಂದನೆ ಸಿಗದಿರುವುದೇ ಹೋರಾಟ ತೀವ್ರಗೊಳ್ಳಲು ಕಾರಣ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು. ಪರಿಸ್ಥಿತಿ ನಿಯಂತ್ರಿಸಲು ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಸಭೆ

ಇನ್ನೊಂದೆಡೆ, ಕಬ್ಬಿನ ದರದ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಗೌಪ್ಯ ಸ್ಥಳದಲ್ಲಿ ಸಭೆ ನಡೆಯುತ್ತಿದೆ ಎಂದು ತಿಳಿದುಬಂದಿದೆ. ಸಭೆಯಲ್ಲಿ ರೈತ ಮುಖಂಡರಾದ ಚೂನ್ನಪ್ಪ ಪೂಜಾರಿ, ಶಶಿಕಾಂತ ಗುರೂಜಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಪಾಲ್ಗೊಂಡಿದ್ದಾರೆ ಎನ್ನಲಾಗಿದೆ.

Must Read

Skip to toolbar