November 12, 2026
Thursday, November 12, 2026
spot_img

ಬೆಳಗಾವಿ ಚಳಿಗಾಲದ ಅಧಿವೇಶನ : 7 ಸಾವಿರ ಪೊಲೀಸರ ನಿಯೋಜನೆಗೆ ಸಿದ್ಧತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕುಂದಾನಗರಿ ಬೆಳಗಾವಿಯಲ್ಲಿ ಡಿಸೆಂಬರ್ 2ರಿಂದ 11ರವರೆಗೆ ಚಳಿಗಾಲದ ಅಧಿವೇಶನ ನಡೆಯಲಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್‌ ಇಲಾಖೆ ಸಿದ್ಧತೆ ನಡೆಸಿ.

ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನಕ್ಕೆ ರೈತರು, ಕಾರ್ಮಿಕರು, ಸೇರಿದಂತೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ, ಧರಣಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟಗಳು ನಡೆಯುವ ಸಾಧ್ಯತೆ ಹಿನ್ನೆಲೆ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲು ಸಿದ್ಧತೆ ನಡೆಸಲಾಗಿದೆ.

ನಗರ ಪೊಲೀಸ್ ಆಯುಕ್ತ ಪ್ರಕಾಶ ನಿಕಮ್ ಅವರ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ಈಗಾಗಲೇ ಭದ್ರತಾ ವ್ಯವಸ್ಥೆಯ ಪರಿಶೀಲನೆ ಆರಂಭಿಸಿದ್ದಾರೆ. ಖುದ್ದು ಪೊಲೀಸ್ ಆಯುಕ್ತರೇ ಸುವರ್ಣಸೌಧ ಸೇರಿದಂತೆ ಪ್ರತಿಭಟನೆಗಳು ನಡೆಯುವ ಪ್ರಮುಖ ಸ್ಥಳಗಳಿಗೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.

ಯಾವ ಸ್ಥಳದಲ್ಲಿ ಎಷ್ಟು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು, ಯಾವ ರೀತಿಯಲ್ಲಿ ಭದ್ರತಾ ವ್ಯವಸ್ಥೆ ರೂಪಿಸಬೇಕು, ಪ್ರತಿಭಟನಾಕಾರರ ನಿರ್ವಹಣೆ ಹೇಗಿರಬೇಕು ಎಂಬುದರ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. ಒಟ್ಟಾರೆ ಏಳು ಸಾವಿರ ಪೊಲೀಸರನ್ನು ನಿಯೋಜನೆ ಮಾಡಲು ಇಲಾಖೆ ಸಿದ್ಧತೆ ನಡೆಸಿದೆ. ಬೆಳಗಾವಿ ಮಾತ್ರವಲ್ಲದೆ ಇತರ ಜಿಲ್ಲೆಗಳಿಂದಲೂ ಪೊಲೀಸ್‌ ಸಿಬ್ಬಂದಿಯನ್ನು ಕರೆಸಿಕೊಳ್ಳುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಜೊತೆಗೆ 35 ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲು ಸಿದ್ಧತೆ ನಡೆಸಲಾಗಿದ್ದು, ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

Must Read