ಹೊಸದಿಗಂತ ವರದಿ ಬೆಳಗಾವಿ:
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 2 ರಿಂದ 11 ರವರೆಗೆ ನಡೆಯಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸುವರ್ಣ ಸೌಧದ ಸುತ್ತಮುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಮ್ ಆದೇಶ ಹೊರಡಿಸಿದ್ದಾರೆ. ನವೆಂಬರ್ 20 ರಿಂದ ಡಿಸೆಂಬರ್ 19 ರವರೆಗೆ ಒಟ್ಟು 30 ದಿನಗಳ ಕಾಲ ಈ ನಿರ್ಬಂಧ ಜಾರಿಯಲ್ಲಿರಲಿದೆ.
ಅಧಿವೇಶನದ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು, ರೈತರು ಹಾಗೂ ಇತರ ಸಾರ್ವಜನಿಕರು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಾಗೂ ತಮ್ಮ ಬೇಡಿಕೆಗಳ ಕಡೆಗೆ ಸರ್ಕಾರದ ಗಮನ ಸೆಳೆಯಲು ಬೆಳಗಾವಿ ಸುವರ್ಣ ವಿಧಾನಸೌಧದ ಮುಂದೆ ಧರಣಿ ಸತ್ಯಾಗ್ರಹಗಳನ್ನು ಆಯೋಜಿಸಿ ಸುವರ್ಣ ವಿದಾನಸೌಧದ ಮುಂದೆ ಹಾಯ್ದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 48 ರಲ್ಲಿಯ ವಾಹನಗಳ ಸಂಚಾರಕ್ಕೆ ವ್ಯತ್ಯಯ ಉಂಟು ಮಾಡುವ ಸಾಧ್ಯತೆ ಇರುತ್ತದೆ ಈ ಹಿನ್ನೆಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಪರಿಶೀಲನೆ
ಇಂದು ಗುರುವಾರ ಸುವರ್ಣ ವಿಧಾನ ಸೌಧಕ್ಕೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿ ನೀಡಿ ಅಧಿವೇಶನದ ಅಗತ್ಯ ಸಿದ್ಧತೆಗಳನ್ನು ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ, ಮಧ್ಯಮ ಕೊಠಡಿ, ಬ್ಯಾಂಕ್ವೆಟ್ ಹಾಲ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಆಸನ ವ್ಯವಸ್ಥೆ, ಸ್ವಚ್ಛತೆ ಹಾಗೂ ಇತರೆ ಸೌಲಭ್ಯಗಳನ್ನು ಸುಸಜ್ಜಿತವಾಗಿ ಮಾಡಬೇಕು. ಪ್ರತಿಯೊಂದು ಪ್ರದೇಶದಲ್ಲಿಯೂ ಸಿಸಿಟಿವಿ ಕ್ಯಾಮೆರಾಗಳು ಕಡ್ಡಾಯವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದರು.
ಯಾವುದೇ ರೀತಿಯ ವಿದ್ಯುತ್ ವ್ಯತ್ಯಯ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಲಿಫ್ಟ್‌ಗಳು ಸುಗಮವಾಗಿ ಕಾರ್ಯನಿರ್ವಹಿಸುವಂತೆ ನಿರ್ವಹಣೆ ಮಾಡಬೇಕು ಎಂದು ಸೂಚಿಸಿದರು.

ಸಚಿವರು, ಅಧಿಕಾರಿಗಳು, ಸಿಬ್ಬಂದಿ, ಮಾಧ್ಯಮ ಪ್ರತಿನಿಧಿಗಳು, ಮಾರ್ಷಲ್‌ಗಳು ಹಾಗೂ ಇತರ ಸಿಬ್ಬಂದಿಗೆ ಊಟದ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು. ಅಧಿವೇಶನದ ವೇಳೆ ಭದ್ರತೆ ಹಾಗೂ ಸಂಚಾರ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಪೊಲೀಸ್ ಇಲಾಖೆಯೊಂದಿಗೆ ಇತರೆ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಅಗತ್ಯ ಸ್ಥಳಗಳಲ್ಲಿ ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ವಾಹನಗಳ ಸಂಚಾರ ಹಾಗೂ ಪಾಕಿರ್ಂಗ್ ವ್ಯವಸ್ಥೆಯನ್ನು ಸುಗಮಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಇದನ್ನೂ ಓದಿ:
ಮಹಿಳಾ ಶಾಸಕರು, ಸಚಿವರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಬಳಕೆ ಮಾಡುವ ಶೌಚಾಲಯಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಮುಂಚಿತವಾಗಿಯೇ ಪೂರ್ಣಗೊಳಿಸಿ, ಯಾವುದೇ ಕೊರತೆಯಾಗದಂತೆ ಸಂಬಂಧಿಸಿದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು.
ಈ ಸಂದರ್ಭದಲ್ಲಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಆಹಾರ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ ನಾಯಕ, ಲೋಕೋಪಯೋಗಿ, ಹೆಸ್ಕಾಂ, ಪೆÇಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.



