ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೊಸ ವರ್ಷದ ಮೊದಲ ದಿನವೇ ಗಣಿನಾಡು ಬಳ್ಳಾರಿಯನ್ನು ನಡುಗಿಸಿದ್ದ ಬ್ಯಾನರ್ ಗಲಾಟೆ ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿ ಗನ್‌ಮ್ಯಾನ್ ಗುರುಚರಣ್ ಸಿಂಗ್ ಸೇರಿದಂತೆ ಒಟ್ಟು 26 ಆರೋಪಿಗಳಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸೋಮವಾರ ಆದೇಶಿಸಿದೆ. ನ್ಯಾಯಾಲಯದ ಆದೇಶದ ಬೆನ್ನಲ್ಲೇ ಪೊಲೀಸರು ಎಲ್ಲಾ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಿದ್ದಾರೆ.
ಜನವರಿ 1ರಂದು ಬ್ಯಾನರ್ ಕಟ್ಟುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ ಉಂಟಾಗಿತ್ತು. ಈ ವೇಳೆ ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಎಂಬುವವರ ಗನ್‌ಮ್ಯಾನ್ ಗುರುಚರಣ್ ಸಿಂಗ್ ನಡೆಸಿದ ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಬಲಿಯಾಗಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಈಗಾಗಲೇ ಗನ್‌ಮ್ಯಾನ್‌ಗಳಾದ ಗುರುಚರಣ್ ಸಿಂಗ್, ಬಲ್ಜಿತ್ ಸಿಂಗ್ ಮತ್ತು ಮಹೇಂದ್ರ ಸಿಂಗ್ ಎಂಬುವವರನ್ನು ಬಂಧಿಸಿದ್ದಾರೆ.
ಆರೋಪಿ ಗುರುಚರಣ್ ಸಿಂಗ್‌ನನ್ನು ಆತ ತಂಗಿದ್ದ ಎಂಆರ್ವಿ ಬಡಾವಣೆಯ ನಿವಾಸಕ್ಕೆ ಕರೆದೊಯ್ದು ಪೊಲೀಸರು ಮಹಜರು ನಡೆಸಿದ್ದಾರೆ. ಈ ವೇಳೆ ಘಟನೆಗೆ ಬಳಸಲಾದ ಬುಲೆಟ್ ಕಾಟ್ರಿಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಘಟನೆ ನಡೆದ ಸ್ಥಳ ಹಾಗೂ ಜನಾರ್ದನ ರೆಡ್ಡಿ ನಿವಾಸದ ಬಳಿಯೂ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಸಾಕ್ಷ್ಯ ಸಂಗ್ರಹಿಸಿದ್ದಾರೆ.
ಬ್ರೂಸ್‌ಪೇಟೆ ಠಾಣೆಯಲ್ಲಿ ದಾಖಲಾಗಿರುವ ಒಟ್ಟು 6 ಪ್ರಕರಣಗಳಿಗೆ ಸಂಬಂಧಿಸಿದಂತೆ ಈವರೆಗೆ 45 ಜನರನ್ನು ವಶಕ್ಕೆ ಪಡೆಯಲಾಗಿತ್ತು. ಈ ಪೈಕಿ ಕಾಂಗ್ರೆಸ್‌ನ 10 ಹಾಗೂ ಬಿಜೆಪಿಯ 11 ಕಾರ್ಯಕರ್ತರು ಸೇರಿದಂತೆ ಒಟ್ಟು 26 ಜನರನ್ನು ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಪ್ರಕರಣವು ಜನಪ್ರತಿನಿಧಿಗಳಿಗೆ ಸಂಬಂಧಿಸಿದ್ದರಿಂದ ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಈಗ ಆರೋಪಿಗಳು ಜೈಲು ಪಾಲಾಗಿದ್ದಾರೆ.

