ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬೆದರಿಕೆ ಪ್ರಕರಣ: ಆರೋಪಿ ಅರೆಸ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಪೊರಂಗಿಪೇಟೆಯಲ್ಲಿ ಅಡ್ಡಗಟ್ಟಿ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ತಿಳಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶುಕ್ರವಾರ ರಾತ್ರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಮಂಗಳೂರಿನ ಫಳ್ನೀರು ನಿವಾಸಿ ರಿಯಾಜ್ (38) ಎಂಬಾತನನ್ನು ಬಂಧಿಸಲಾಗಿದ್ದು, ಘಟನೆಗೆ ಸಂಬಂಧಿಸಿ ವಾಹನವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದರು.
ಆರೋಪಿಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇದುವರೆಗೂ ಇಲ್ಲ ಹಾಗೂ ಯಾವುದೇ ಆಯುಧಗಳು ಆತನ ಬಳಿ ಇರಲಿಲ್ಲ. ರಸ್ತೆಯಲ್ಲಿ ವಾಹನ ಓವರ್ ಟೇಕ್ ಮಾಡುವ ಸಂದರ್ಭದ ಜಗಳ ಘಟನೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದ್ದು, ಮತ್ತಷ್ಟು ತನಿಖೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಗುರುವಾರ ರಾತ್ರಿ ಸುಮಾರು 11.15ಕ್ಕೆ ಘಟನೆ ನಡೆದಿದ್ದು, ಶಾಸಕ ಪೂಂಜಾ ಅವರ ಚಾಲಕ ದೂರಿನಂತೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಘಟನೆ ನಡೆದಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಈ ಘಟನೆ ರಾಜ್ಯದಾದ್ಯಂತ ತಲ್ಲಣ ಮೂಡಿಸಿದ್ದು,ಪೊಲೀಸರ ತಂಡ ಹೆದ್ದಾರಿಯ ಸಿಸಿ ಕ್ಯಾಮರದ ಸಹಾಯದಿಂದ ಆರೋಪಿಯ ಕಾರನ್ನು ಪತ್ತೆಹಚ್ಚಿ ಬಳಿಕ‌ ಅತನನ್ನು ಮನೆಯಿಂದಲೇ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!