Monday, December 29, 2025

ಬೆಂಗಳೂರಿನ ಡ್ರಗ್ಸ್ ಸೀಜ್ ವಿಚಾರ | ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಹೋರಾಟ: ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿರುವ ಘಟನೆ ರಾಜ್ಯ ಸರ್ಕಾರದ ಕಾರ್ಯವೈಖರಿಯ ಮೇಲೆ ಪ್ರಶ್ನೆಗಳನ್ನು ಎಬ್ಬಿಸಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ನಿಖಿಲ್ ಕುಮಾರಸ್ವಾಮಿ, ರಾಜ್ಯದಲ್ಲಿ ನಡೆಯುತ್ತಿರುವ ಡ್ರಗ್ಸ್ ದಂಧೆಗೆ ಸರ್ಕಾರ ಗಂಭೀರತೆ ತೋರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ. ಕಳೆದ ಜುಲೈನಲ್ಲಿ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕಾ ಘಟಕ ಪತ್ತೆಹಚ್ಚಿ ಸುಮಾರು 390 ಕೋಟಿ ರೂಪಾಯಿ ಮೌಲ್ಯದ 192 ಕೆ.ಜಿ ಮೆಫೆಡ್ರೋನ್ ವಶಪಡಿಸಿಕೊಂಡಿದ್ದು ಮಹಾರಾಷ್ಟ್ರ ಪೊಲೀಸರು ಎಂಬುದನ್ನು ಅವರು ನೆನಪಿಸಿದ್ದಾರೆ. ಇದೀಗ ಮತ್ತೆ ಬೆಂಗಳೂರಿನ ಮೂರು ಡ್ರಗ್ಸ್ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ ಸುಮಾರು 56 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಸೀಜ್ ಮಾಡಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಡ್ರಗ್ಸ್ ದಂಧೆ ನಡೆಯುತ್ತಿದ್ದರೂ ಕರ್ನಾಟಕ ಪೊಲೀಸ್ ಇಲಾಖೆ ಪರಿಣಾಮಕಾರಿ ಕ್ರಮ ಕೈಗೊಳ್ಳದಿರುವುದು ಆತಂಕಕಾರಿ ಎಂದು ನಿಖಿಲ್ ಟೀಕಿಸಿದ್ದಾರೆ. ದಂಧೆಕೋರರನ್ನು ಪತ್ತೆಹಚ್ಚಲು ಹೊರರಾಜ್ಯದ ಪೊಲೀಸರು ಬರಬೇಕಾದ ಪರಿಸ್ಥಿತಿ ಏಕೆ ಎಂಬ ಪ್ರಶ್ನೆಯನ್ನೂ ಅವರು ಎತ್ತಿದ್ದಾರೆ.

error: Content is protected !!