ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆಯೂ ಮಳೆ ಸುರಿದಿದ್ದು, ಜನರು ಹೈರಾಣಾಗಿದ್ದಾರೆ.
ರಾಜಕಾಲುವೆ ಆರ್ಭಟಕ್ಕೆ ಮನೆಗಳೇ ಮುಳುಗಡೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಹಕಾರ ನಗರದ ಸಿಟಿ ಮಾರ್ಕೆಟ್ ಹಿಂಬದಿಯಲ್ಲಿ ರಸ್ತೆ ಮೇಲೆ ನಾಲ್ಕು ಅಡಿಯಷ್ಟು ನೀರು ನಿಂತಿದ್ದು, ಜನರು ಹಾಗೂ ವಾಹನ ಸವಾರರು ಪರದಾಡುವಂತಾಗಿತ್ತು.
ಸಹಕಾರ ನಗರದಲ್ಲಿ ಸುರಿದ ಮಳೆಯಿಂದಾಗಿ ಅಂಗಡಿ ಮಳಿಗೆಗಳಿಗೆ ನೀರು ನುಗ್ಗಿ ಲಕ್ಷಾಂತರ ಮೌಲ್ಯದ ವಸ್ತುಗಳು ಹಾನಿಯಾಗಿವೆ, ಈ ಹಿನ್ನೆಲೆಯಲ್ಲಿ ಅಂಗಡಿ ಮಾಲೀಕರು ಏರ್‌ಪೋರ್ಟ್ ಸಂಪರ್ಕಿಸುವ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಇದರಿಂದಾಗಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಹೈರಾಣಾಗಿದ್ದಾರೆ.
ಕೊಡಿಗೇಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಮಳೆ ಗಾಳಿಗೆ ನಿಂತಿದ್ದ ಕಾರ್ ಹಾಗೂ ಬೈಕ್ ಮೇಲೆ ವಿದ್ಯುತ್ ಕಂಬ ಬಿದ್ದಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ವಾಹನಗಳು ಜಖಂ ಆಗಿದೆ.
ರಾಜ್ಯದಲ್ಲಿ ಇನ್ನೂ ಮೂರು ದಿನಗಳು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ಸೇರಿ 12 ಜಿಲ್ಲೆಗಳಲ್ಲಿ ಮಳೆ ಸುರಿಯಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.