ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ಆರ್ಸಿಬಿ ಐಪಿಎಲ್ ವಿಜಯೋತ್ಸವ ಆಚರಣೆ ಸಂದರ್ಭ ಸಂಭವಿಸಿದ ಕಾಲ್ತುಳಿತ ಹಾಗೂ 11 ಜನರ ಸಾವಿಗೆ ಸಂಬಂಧಿಸಿದ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ.
ಘಟನೆ ಬಗ್ಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಿದ್ದು, ಮಧ್ಯಾಹ್ನ 2.30 ಕ್ಕೆ ವಿಚಾರಣೆ ನಿಗದಿಪಡಿಸಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಕಾಮೇಶ್ವರ ರಾವ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ರಾಜ್ಯ ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ನೀಡಿತ್ತು. ಈ ಬಗ್ಗೆ ಮಧ್ಯಾಹ್ನ ವಿಚಾರಣೆ ನಡೆಸುವುದಾಗಿ ಕೋರ್ಟ್ ತಿಳಿಸಿದೆ.
ಐಪಿಎಲ್‌ನ 18ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚಾಂಪಿಯನ್ ಆಗಿರುವ ಸಂಭ್ರಮಕ್ಕೆ ಸಾಕ್ಷಿಯಾಗಲು ರಾಜಧಾನಿಯ ದಶದಿಕ್ಕುಗಳಿಂದ ಯುವ ಅಭಿಮಾನಿಗಳು ಸಾಗರೋಪಾದಿಯಾಗಿ ಹರಿದು ಬಂದಿದ್ದರು. ಈ ವೇಳೆ ಕಾಲ್ತುಳಿತಕ್ಕೆ 11 ಮಂದಿ ಬಲಿಯಾಗಿದ್ದಾರೆ.