ಹೊಸದಿಗಂತ ಡಿಜಿಟಲ್ ಡೆಸ್ಕ್
ಹೊಸದಿಲ್ಲಿ: ಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೇ ಅನುಮೋದನೆ ದೊರೆತಿದ್ದು, ಆರ್ಥಿಕ ಇಲಾಖೆಯ ಒಪ್ಪಿಗೆ ಪಡೆದ ಕೂಡಲೇ ಸಚಿವ ಸಂಪುಟದಲ್ಲಿ ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಸರ್ವ ಪ್ರಯತ್ನಗಳನ್ನು ಮಾಡುವುದಾಗಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಹಾಗೂ ಇಂಧನ ಸಚಿವರನ್ನು ಭೇಟಿಯಾದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಕೇಂದ್ರ ಸಚಿವರೊಂದಿಗೆ ನಾಲ್ಕೈದು ಯೋಜನೆಗಳ ಬಗ್ಗೆ ವಿವರವಾಗಿ ಚರ್ಚೆಯಾಗಿದೆ. ಮಹದಾಯಿ, ಮೇಕೆದಾಟು, ಕೃಷ್ಣಾ ಮೇಲ್ದಂಡೆ ಹಾಗೂ ಭದ್ರಾ ಮೇಲ್ದಂಡೆ ಕುರಿತು ಚರ್ಚೆಯಾಗಿದೆ. ಈ ಯೋಜನೆಗಳ ಕುರಿತು ರಾಜ್ಯದ ನಿಲುವು ಹಾಗೂ ವಿಧಾನಸಭೆಯಲ್ಲಿ ಕೈಗೊಂಡ ನಿರ್ಣಯಗಳ ಬಗ್ಗೆ ಮಾಹಿತಿ ನೀಡಲಾಗಿದೆ. ಮೇಕೆದಾಟು ಯೋಜನೆಯ ಡಿಪಿಆರ್ ಅನುಮೋದಿಸುವುದು ಹಾಗೂ ಮಹದಾಯಿ ಯೋಜನೆಯ ಸಾಧ್ಯತಾ ವರದಿಗೆ ಒಪ್ಪಿಗೆ ನೀಡುವುದನ್ನು ಆದಷ್ಟು ಬೇಗನೆ ಮಾಡಲಾಗುವುದು ಎಂದು ಹೇಳಿದ್ದಾರೆ ಎಂದರು.
ಮೇಕೆದಾಟು ಯೋಜನೆಯಿಂದ ನಮಗೆ ನ್ಯಾಯಸಮ್ಮತವಾಗಿ ದೊರೆಯಬೇಕಾದ ನೀರು ನಮಗೆ ದೊರೆಯುತ್ತದೆ. ಇದರಿಂದ ತಮಿಳುನಾಡಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗುವುದಿಲ್ಲ. ಪ್ರತಿ ವರ್ಷ ತಮಿಳುನಾಡಿಗೆ ಅವರ ಪಾಲಿನ ನೀರಿಗಿಂತಲೂ ಹೆಚ್ಚುವರಿ ನೀರು ಹೋಗುತ್ತಿದೆ. ಅದು ಎಲ್ಲಿ ಕಡಿಮೆಯಾಗುತ್ತದೆ ಎನ್ನುವ ಆತಂಕ ಅವರದ್ದು. ನ್ಯಾಯಾಧಿಕರಣದ ತೀರ್ಮಾನದಂತೆ ಅವರ ಪಾಲನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.
ಕೃಷ್ಣಾ ಮೇಲ್ದಂಡೆ ಯೋಜನೆ
ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಬಗ್ಗೆ ನ್ಯಾಯಾಲಯದಲ್ಲಿ ಪ್ರಕರಣವಿದೆ. ಈ ಬಗ್ಗೆ ಕೇಂದ್ರ ಸರಕಾರ ಅಫಿಡವಿಟ್ ಸಲ್ಲಿಸಬೇಕಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಯಿತು. ನಮ್ಮ ವಕೀಲರು ಸಹ ನ್ಯಾಯಾಲಯದಲ್ಲಿ ವಾದ ಮಾಡಿದ್ದಾರೆ. ಜೊತೆಗೆ ನ್ಯಾಯಮೂರ್ತಿಗಳ ನೇಮಕಾತಿ ಆದಷ್ಟು ಶೀಘ್ರವಾಗಿ ಮಾಡಲು ಪ್ರಯತ್ನಗಳು ನಡೆದಿವೆ ಎಂದು ತಿಳಿಸಿದರು.