September 21, 2026
Monday, September 21, 2026
spot_img

ದುರ್ಗಕ್ಕೆ ಹರಿದ ಭದ್ರಾ ನೀರು: ಸೆ.24ರಂದು ಸಿಎಂ ಡಿಕೆಶಿಯಿಂದ ಗಂಗಾಪೂಜೆ

ಹೊಸದಿಗಂತ ವರದಿ ಚಿತ್ರದುರ್ಗ:

ಭದ್ರಾ ಮೇಲ್ದಂಡೆ ಯೋಜನೆಯ ಮೂಲಕ ಬಯಲು ಸೀಮೆಗೆ ಜೀವಜಲ ಹರಿಸುವ ಮಹತ್ವದ ಹೆಜ್ಜೆ ಇಡಲಾಗಿದ್ದು, ಸೆ.24ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಿತ್ರದುರ್ಗಕ್ಕೆ ಆಗಮಿಸಿ ಭದ್ರಾ ಜಲಕ್ಕೆ ಗಂಗಾಪೂಜೆ ನೆರವೇರಿಸಲಿದ್ದಾರೆ. ಬಳಿಕ ನಗರದ ದಾವಣಗೆರೆ ರಸ್ತೆಯ ಮಾದಾರ ಚನ್ನಯ್ಯ ಗುರುಪೀಠದ ಪಕ್ಕದ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಮಾರಂಭ ನಡೆಯಲಿದೆ ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಿದ ಸಚಿವರು, ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಸ್ತುತ 3 ಟಿಎಂಸಿ ನೀರನ್ನು ಪ್ರಾಯೋಗಿಕವಾಗಿ ಹರಿಸಲಾಗುತ್ತಿದೆ ಎಂದರು. ಈ ವರ್ಷದ ನವೆಂಬರ್–ಡಿಸೆಂಬರ್ ಒಳಗೆ ತುಂಗಾ ನದಿಯಿಂದ 17.5 ಟಿಎಂಸಿ ನೀರನ್ನು ಲಿಫ್ಟ್ ಮಾಡಿ ಯೋಜನೆಯನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ. ಅರಣ್ಯ ಇಲಾಖೆಯ ಅನುಮತಿ ಪಡೆದು ವಿದ್ಯುತ್ ಟವರ್ ಕಾಮಗಾರಿಗಳನ್ನೂ ಚುರುಕುಗೊಳಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ:

ಯೋಜನೆಗೆ ಕೇಂದ್ರ ಸರ್ಕಾರ ಘೋಷಿಸಿರುವ 5,300 ಕೋಟಿ ಅನುದಾನ ಇನ್ನೂ ಬಿಡುಗಡೆಯಾಗಿಲ್ಲ. ಆದರೆ ರಾಜ್ಯ ಸರ್ಕಾರ ಈಗಾಗಲೇ ಸುಮಾರು 12 ಸಾವಿರ ಕೋಟಿ ವೆಚ್ಚ ಮಾಡಿದೆ ಎಂದು ಚಲುವರಾಯಸ್ವಾಮಿ ತಿಳಿಸಿದರು. ಚಿತ್ರದುರ್ಗಕ್ಕೆ ನೀರು ಹರಿಸುವ ಯೋಜನೆಗಾಗಿ ದಿವಂಗತ ಸಚಿವ ಡಿ. ಸುಧಾಕರ್ ಅವರ ಪ್ರಯತ್ನವನ್ನೂ ಅವರು ಸ್ಮರಿಸಿದರು.

ಸೆ.24ರ ಕಾರ್ಯಕ್ರಮವು ಈ ಭಾಗದ ಜನರ ದಶಕಗಳ ಕನಸಿಗೆ ಹೊಸ ರೂಪ ನೀಡುವ ಸಂದರ್ಭವಾಗಿದ್ದು, ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿಗಳು ಸಿದ್ಧತೆ ಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು. ಸಾರ್ವಜನಿಕರಿಗೆ ಸುಗಮ ಪ್ರವೇಶ, ಊಟದ ವ್ಯವಸ್ಥೆ, ಸಂಚಾರ ನಿರ್ವಹಣೆ ಹಾಗೂ ಗಂಗಾಪೂಜೆಯ ನೇರ ಪ್ರಸಾರಕ್ಕೆ ಅಗತ್ಯ ವ್ಯವಸ್ಥೆ ಮಾಡುವಂತೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ, ಜಿಲ್ಲಾಧಿಕಾರಿ ಎಸ್. ರಮ್ಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !