ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರದ ಉಕ್ಕಿನ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ಭಗವದ್ಗೀತೆಯನ್ನು ಶಾಲಾ-ಕಾಲೇಜು ವಿದ್ಯಾರ್ಥಿಗಳ ಪಠ್ಯಕ್ರಮದಲ್ಲಿ ಕಡ್ಡಾಯವಾಗಿ ಸೇರಿಸಬೇಕು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕುಮಾರಸ್ವಾಮಿ ಅವರ ನಿಲುವಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಜೊತೆ ಸೇರ್ಪಡೆಗೊಂಡ ನಂತರ ಕುಮಾರಸ್ವಾಮಿ ಅವರು *’ಮನು ವಾದಿ’ಯಾಗಿದ್ದಾರೆ ಎಂದು ಸಿಎಂ ನೇರವಾಗಿ ಟೀಕಿಸಿದ್ದಾರೆ.
ಸಿದ್ದರಾಮಯ್ಯನವರು ತಮ್ಮ ನಿಲುವನ್ನು ಸಮರ್ಥಿಸಿಕೊಂಡು, “ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಈಗಾಗಲೇ ಸಂವಿಧಾನದ ಪೀಠಿಕೆಯನ್ನು ಬೋಧಿಸಲಾಗುತ್ತಿದೆ. ಪ್ರತಿಯೊಬ್ಬರಿಗೂ ಸಂವಿಧಾನದ ಅರಿವು ಮುಖ್ಯ. ಅದರಲ್ಲೂ ಮಕ್ಕಳಿಗೆ ಅವರ ಹಕ್ಕುಗಳು ಮತ್ತು ಬಾಧ್ಯತೆಗಳೇನು ಎಂಬುದು ಅರ್ಥ ಆಗಬೇಕು,” ಎಂದು ಒತ್ತಿ ಹೇಳಿದರು. ಇದೇ ಕಾರಣಕ್ಕಾಗಿ ಮಕ್ಕಳ ಪಠ್ಯದಲ್ಲಿ ಸಂವಿಧಾನದ ಪೀಠಿಕೆಯನ್ನು ಅಳವಡಿಸಲಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಸಮಾಜದಲ್ಲಿ ಸಮಾನತೆ ಮತ್ತು ನ್ಯಾಯದ ಮಹತ್ವವನ್ನು ತಿಳಿಸಲು ಡಾ. ಬಿ.ಆರ್. ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯದ ಹೋರಾಟದ ಕುರಿತು ಮಕ್ಕಳಿಗೆ ತಿಳಿಸುವುದೇ ಸರ್ಕಾರದ ಮುಖ್ಯ ಉದ್ದೇಶ ಎಂದು ಅವರು ಪುನರುಚ್ಚರಿಸಿದರು.

